ಬೆಂಗಳೂರು: ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.
ಕೊಪ್ಪಳ ಮೂಲದ ಯುವಕ ಬಂಧನ
ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜುನಾಥ್ ತನ್ನ ಐಪಿ ವಿಳಾಸವನ್ನು ಅಳಿಸಿಹಾಕಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ.
ಆದರೆ, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಸಿಬಿ ಪೊಲೀಸರು ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ 48 ಕಿಡಿಗೇಡಿಗಳ ಐಪಿ ವಿಳಾಸಗಳನ್ನು ಪತ್ತೆ ಹಚ್ಚಿದ್ದಾರೆ. ಈ ಪೈಕಿ 15 ಮಂದಿಯನ್ನು ಗುರುತಿಸಲಾಗಿದ್ದು, ಸದ್ಯ ಐವರನ್ನು ಬಂಧಿಸಲಾಗಿದೆ. ಈ ಹಿಂದೆ, ಟಿ. ಓಬಣ್ಣ, ಗಂಗಾಧರ, ರಾಜೇಶ್ ಸಿ.ವೈ., ಮತ್ತು ಭುವನ್ ಗೌಡ ಎಚ್.ಎಸ್. ಎಂಬುವವರನ್ನು ಬಂಧಿಸಲಾಗಿತ್ತು.
ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದವರಿಗೆ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ತಮ್ಮ ಅರಿವಿಲ್ಲದೆ ಸಂದೇಶಗಳನ್ನು ಕಳುಹಿಸಿದ್ದವರು ಮತ್ತು ಸಾಮಾನ್ಯವಾಗಿ ಕಾಮೆಂಟ್ ಮಾಡಿದ್ದವರು ಕ್ಷಮೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗುವ ಭರವಸೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಎಂದು ಹೇಳಲಾದ ಕೆಲವರು ರಮ್ಯಾ ಅವರ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ರಮ್ಯಾ, 43 ಖಾತೆಗಳ ವಿರುದ್ಧ ಸೈಬರ್ ಠಾಣೆಗೆ ದೂರು ನೀಡಿದ್ದರು.