Home ಬೆಂಗಳೂರು ಏಕಕಾಲಕ್ಕೆ ಒಂದು ಗ್ರಾಮ–ಒಂದು ಚುನಾವಣೆ ಸೂತ್ರ

ಏಕಕಾಲಕ್ಕೆ ಒಂದು ಗ್ರಾಮ–ಒಂದು ಚುನಾವಣೆ ಸೂತ್ರ

ಬೆಂಗಳೂರು: ರಾಜ್ಯದ ಶೇ 90ರಷ್ಟು ಗ್ರಾಮ ಪಂಚಾಯಿತಿಗಳ ಅವಧಿ ಇನ್ನೆರಡು ತಿಂಗಳ ಒಳಗೆ ಮುಕ್ತಾಯವಾಗಲಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳ ಜತೆಗೇ ಗ್ರಾಮ ಪಂಚಾಯಿತಿಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ‘ಮೂರು ಸ್ತರ: ಒಂದು ಗ್ರಾಮ–ಒಂದು ಚುನಾವಣೆ’ ಸೂತ್ರವನ್ನು ಸಿದ್ಧಪಡಿಸುತ್ತಿದೆ. ಈ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲಟ್ ಪೇಪರ್) ಬಳಸಿ ಮತ ಚಲಾಯಿಸುವ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಹಿಂದೆ ಇವಿಎಂಗಳನ್ನು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಸಲಾಗಿತ್ತು. 

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳಿಗೆ 2020–21ರಲ್ಲಿ ಚುನಾವಣೆ ನಡೆಸಲಾಗಿತ್ತು. ಅವುಗಳ ಅವಧಿಯು ಇದೇ ಜನವರಿ, ಫೆಬ್ರುವರಿ ಮತ್ತು ಮಾರ್ಚ್‌ ಒಳಗೆ ಕೊನೆಗೊಳ್ಳಲಿವೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2016ರ ಏಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಅಂದು ಆಯ್ಕೆಯಾಗಿದ್ದ ಸದಸ್ಯರ ಅವಧಿ 2021ರ ಏಪ್ರಿಲ್ 27ರಂದು ಮುಕ್ತಾಯವಾಗಿತ್ತು. 

ಕೆಲ ವರ್ಷಗಳ ಹಿಂದೆಯೇ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡು ಪ್ರಕಟಿಸಿತ್ತು. ಆದರೆ, ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿತ್ತು. ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದು ‘ಕರ್ನಾಟಕ ಪಂಚಾಯತ್‌ ರಾಜ್ ಸೀಮಾ ನಿರ್ಣಯ ಆಯೋಗ’ಕ್ಕೆ ನೀಡಿತ್ತು. 

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ ಮೊರೆ ಹೋಗಿತ್ತು. ನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಲು ಸರ್ಕಾರ ರಚಿಸಿದ್ದ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಅಧಿಸೂಚನೆ ಹೊರಡಿಸಿತ್ತು. ಆದರೆ, ಮೀಸಲಾತಿ ನಿಗದಿ ಅಂತಿಮಗೊಳಿಸಿರಲಿಲ್ಲ. 

ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನಪರಿಷತ್‌ ಸದಸ್ಯರು, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವಿವಿಧ ಸಂಘಟನೆಗಳ ಜನಪ್ರತಿನಿಧಿಗಳೂ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಈ ವಿಷಯ ವಿಧಾನಮಂಡಲದ ಅಧಿವೇಶನದಲ್ಲೂ ಚರ್ಚೆಯಾಗಿತ್ತು. 

You cannot copy content of this page

Exit mobile version