Home ಬೆಂಗಳೂರು ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಸಮ್ಮೇಳನದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ವ್ಯಕ್ತವಾಗಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಶಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ 12 ರಿಂದ 15% ರಷ್ಟಿದ್ದ ಶಿಕ್ಷಣದ ಪ್ರಮಾಣ ಪ್ರಸ್ತುತ 74% ರಷ್ಟಿದೆ. ಶಿಕ್ಷಣ ಕ್ಷೇತ್ರವನ್ನು ಅವಲೋಕಿಸಿದಾಗ ಗುಣಮಟ್ಟದ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಒದಗಿಸುವ ಶಿಕ್ಷಣ ದೊರಕುತ್ತಿದೆಯೇ ಎಂದು ಯೋಚಿಸಬೇಕು. ಇದು ಶಿಕ್ಷಕರ ತಪ್ಪಲ್ಲ, ವ್ಯವಸ್ಥೆಯ ಪರಿಣಾಮವಾಗಿ ಜಾತಿ ವ್ಯವಸ್ಥೆ ಸಮಾಜದಲ್ಲಿ ಭದ್ರವಾಗಿ ನೆಲೆಯೂರಿರುವುದರಿಂದ ಶಿಕ್ಷಣದಲ್ಲಿ ನಿರೀಕ್ಷಿಸಿದಷ್ಟು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದರು.

ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆಯಬೇಕು

ಸಂವಿಧಾನವು ಒಬ್ಬ ವ್ಯಕ್ತಿ ಜವಾಬ್ದಾರಿಯುತವಾಗಿ ವಿಕಾಸವಾಗಲು ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆಯಬೇಕೆಂದು ಸ್ಪಷ್ಟವಾಗಿ ಹೇಳುತ್ತದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ, ಮೌಢ್ಯ, ಕಂದಾಚಾರಗಳಿಂದ ಸಮಾಜ ಕೂಡಿದ್ದು, ಇವುಗಳನ್ನು ದೂರ ಮಾಡುವ ಶಿಕ್ಷಣ ಪಡೆಯುವುದು ಅತ್ಯಂತ ಅಗತ್ಯ ಎಂದರು.

ಎಲ್ಲರೂ ಮುಖ್ಯವಾಹಿನಿಗೆ ಬರಲು ಅಸಮಾನತೆ ಹೋಗಲಾಡಿಸಬೇಕು
ಅಸಮಾನತೆಯಿಂದ ಕೂಡಿರುವ ಸಮಾಜದಲ್ಲಿ ಮುಖ್ಯವಾಹಿನಿಗೆ ಎಲ್ಲರೂ ಬರಬೇಕೆಂದರೆ ಸಮಾಜದಲ್ಲಿ ಬದಲಾವಣೆಯಾಗಬೇಕು ಎಂದರು.

ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ
ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಶಿಕ್ಷಣ ಶಿಕ್ಷಕರಿಂದ ಮಾತ್ರ ನೀಡಲು ಸಾಧ್ಯ. ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ ಎಂದರು. ಬುದ್ಧಿ, ಕರುಣೆ ಮತ್ತು ಕೌಶಲ್ಯ ಮಿಳಿತವಾದಾಗ ಮಾತ್ರ ವಿಕಾಸ ಸಾಧ್ಯ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಅತ್ಯಂತ ಹೆಚ್ಚು ಗೌರವಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಅವರ ಕಾರಣದಿಂದಲೇ ಈ ಸ್ಥಾನದವರೆಗೆ ಬೆಳೆದಿರುವುದಾಗಿ ಸ್ಮರಿಸಿದರು.

ಶಿಕ್ಷಕರು ಸಂವಿಧಾನಬದ್ಧ ಕರ್ತವ್ಯವನ್ನು ನಿರ್ವಹಿಸಬೇಕು
ಶಿಕ್ಷಕರು ಸಂವಿಧಾನಬದ್ಧ ಕರ್ತವ್ಯವನ್ನು ನಿರ್ವಹಿಸಬೇಕು. ವಿಷಯಗಳನ್ನು ತರ್ಕ, ಪ್ರಶ್ನೆ ಮಾಡಿ ಒಪ್ಪಿಕೊಳ್ಳಬೇಕು. ಮಕ್ಕಳಿಗೂ ಅದನ್ನೇ ಕಲಿಸಬೇಕು ಎಂದು ಸಲಹೆ ನೀಡಿದರು.

ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ:
ಒಪಿಎಸ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ
ಶಿಕ್ಷಕರ ಹಲವಾರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಹಿಂದೆ ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ 5 ವರ್ಷಗಳಲ್ಲಿ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿದ್ದನ್ನು ಸ್ಮರಿಸಿದರು. ಆರು ಮತ್ತು 7 ನೇ ವೇತನ ಆಯೋಗವನ್ನು ಜಾರಿ ಮಾಡಿದ್ದು, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಒಪಿಎಸ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ಎಂದು ಭರವಸೆ ನೀಡಿದರು. ವೇತನ ಬಡ್ತಿ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ಶಿಕ್ಷಕ ನಡವಳಿಕೆ ಉತ್ತಮವಾಗಿರಬೇಕು ಎಂದರು. ಎಲ್ಲಾ ಮಕ್ಕಳಿಗೂ ವೈಚಾರಿಕತೆ , ವೈಜ್ಞಾನಿಕತೆಯುಳ್ಳ ಶಿಕ್ಷಣ ನೀಡಿದರೆ ಸುಭದ್ರ, ಸುಂದರ ಸಮಾಜ, ದೇಶವನ್ನು ಕಟ್ಟಬಹುದು ಎಂದರಲ್ಲದೆ ಭವಿಷ್ಯ ರೂಪಿಸುವಂಥ ಮಕ್ಕಳನ್ನು ತಯಾರು ಮಾಡಿ ಎಂದು ಕರೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಮೇಲ್ಮನೆ ಸದಸ್ಯರಾದ ಪುಟ್ಟಣ್ಣ, ರಾಮೋಜಿ ಗೌಡ, ಪ್ರೊ.ಬರಗೂರು ರಾಮಚಂದ್ರಪ್ಪ, ಬಸವರಾಜ ಗುಳಿಕಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ , ಮೊದಲಾದವರು ಉಪಸ್ಥಿತರಿದ್ದರು.

You cannot copy content of this page

Exit mobile version