ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ನಿಂದ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿರುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸಿದವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ಶಾಸಕರಲ್ಲಿ ಕೆಲವರು ಬಿಜೆಪಿ ತೊರೆಯಲು ಮುಂದಾಗಿದ್ದಾರೆ ಎಂಬುದು ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಅದರಲ್ಲೂ ಹಿಂದಿನ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಸರ್ಕಾರ ಬೀಳಲು ಪ್ರಮುಖ ಕಾರಣರಾದ ಕೆಲವು ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕತೆ ತೋರಿದ್ದಾರೆ.
ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರ ರೂಪಿಸಿದೆ. ಯಾರೇ ಕಾಂಗ್ರೆಸ್ ಪಕ್ಷಕ್ಕೆ ಸೇರಬಯಸಿದರೆ ಅವರಿಗೆ ಮುಕ್ತ ಸ್ವಾಗತವಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಈಗ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನ ಕೆಲವು ಶಾಸಕರಿಗೆ ಗಾಳ ಹಾಕಲಾಗಿದೆ. ಬೆಂಗಳೂರಿನ ಮೂವರು, ಉತ್ತರ ಕನ್ನಡದ ಒಬ್ಬರು ಪಕ್ಷಾಂತರದ ಬಗ್ಗೆ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಕಾಂಗ್ರೆಸ್ ಸೇರುವ ಶಾಸಕರು ಯಾವುದೇ ಸಚಿವ ಸ್ಥಾನದ ಆಸೆ ಇಟ್ಟುಕೊಂಡರೂ ಅದು ಅವರಿಗೆ ಮರೀಚಿಕೆಯಾಗಲಿದೆ. ಇನ್ನೇನಿದ್ದರೂ ಮುಂದಿನ ಚುನಾವಣಾ ದೃಷ್ಟಿಯಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ತಂದುಕೊಟ್ಟರೆ ಮಾತ್ರ ಕೆಲವು ಬೇಡಿಕೆಗಳನ್ನು ಈಡೇರಿಸಲು ಷರತ್ತು ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಮೊದಲಿಗೆ ಬಿಜೆಪಿ ಶಾಸಕರಲ್ಲಿ ಒಬ್ಬರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಲೋಕಸಭೆ ಚುನಾವಣೆ ವೇಳೆಗೆ ನಾಲ್ಕೈದು ಶಾಸಕರು ಹಂತ ಹಂತವಾಗಿ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
