ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ – ಸಾವಿರಾರು ಜನರಿಂದ ಪ್ರತಿಭಟನೆ

ಕಾರವಾರ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸೋಮವಾರ ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸಿ ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ರಾಜ್ಯಾಧ್ಯಕ್ಷ ರವೀಂದ್ರನಾಥ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿಯು ಹೊನ್ನಾವರದ ಶರಾವತಿ ಸರ್ಕಲ್‌ನಿಂದ ಆರಂಭಗೊಂಡು ಮೂಡಗಣಪತಿ ದೇವಸ್ಥಾನದ ಸಮಾವೇಶ ಮೈದಾನದವರೆಗೆ ಸಾಗಿತು. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆಯ ಜನರ ಬದುಕು ಹಾಗೂ ಅಭಿವೃದ್ಧಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ, ಮನೆಗಳ ದುರಸ್ತಿ ಮತ್ತು ನವೀಕರಣ, ಮೊಬೈಲ್ ಟವರ್‌ಗಳ ಸ್ಥಾಪನೆ ಸೇರಿದಂತೆ ಹಲವು ಮೂಲಸೌಕರ್ಯ ಕಾಮಗಾರಿಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ವರದಿ ಅವೈಜ್ಞಾನಿಕ ಎಂದು ಆರೋಪ :

ಕಸ್ತೂರಿ ರಂಗನ್ ವರದಿಯನ್ನು ಅವೈಜ್ಞಾನಿಕ ಎಂದು ಆರೋಪಿಸಿದ ಹೋರಾಟಗಾರರು, ಸ್ಥಳೀಯ ವಾಸ್ತವಾಂಶಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ವೈಮಾನಿಕ ಸಮೀಕ್ಷೆಯ ಆಧಾರದ ಮೇಲೆ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಆಕ್ಷೇಪಿಸಿದರು. ತೆಂಗು ಮತ್ತು ಅಡಿಕೆ ತೋಟಗಳಿರುವ ಪ್ರದೇಶಗಳನ್ನೂ ಅರಣ್ಯ ಪ್ರದೇಶಗಳೆಂದು ಗುರುತಿಸಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.

ವರದಿ ಜಾರಿಗೂ ಮುನ್ನ ಜಿಲ್ಲೆಯ ವಾಸ್ತವ ಪರಿಸ್ಥಿತಿ, ಜನರ ಬದುಕು, ಕೃಷಿ ಮತ್ತು ತೋಟಗಾರಿಕೆಯನ್ನು ಪರಿಗಣಿಸಿ ಸಮಗ್ರವಾಗಿ ಮರುಪರಿಶೀಲಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Related Articles

ಇತ್ತೀಚಿನ ಸುದ್ದಿಗಳು