Saturday, January 24, 2026

ಸತ್ಯ | ನ್ಯಾಯ |ಧರ್ಮ

ಗ್ರಾಮೀಣ ಜನರಿಗೆ ಆರ್ಥಿಕ ಸ್ವಾವಲಂಬನೆ ಮತ್ತು ದುಡಿಯುವ ಹಕ್ಕನ್ನು ಕೊಟ್ಟಿದ್ದ ಮನರೇಗಾ ಯೋಜನೆಯನ್ನು ಹಾಳುಗೆಡವುತ್ತಿದ್ದಾರೆ:ಸಿಎಂ ಆಕ್ರೋಶ

ಹುಬ್ಬಳ್ಳಿ ಜ25: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ.
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು.

ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 1458000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು.

ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದರು.

ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ.
ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ ?
ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಎಲ್ಲದರಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿದೆ. ರಾಜ್ಯದ ಜನತೆಗೆ ವಂಚಿಸಿದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇದಕ್ಕೆಲ್ಲಾ ಉತ್ತರಿಸಬೇಕು ಎಂದರು.

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಟೀಕಿಸಿದರು.

ನಮ್ಮ ಸರ್ಕಾರ ಬಂದ ಬಳಿಕ 5500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಾವು, ನಮ್ಮ ಕಾಂಗ್ರೆಸ್ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ.

ಇಷ್ಟೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾ ತಿರುಗುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ 2500 ಕೋಟಿ ಸಬ್ಸಿಡಿ ಪ್ರತಿ ವರ್ಷ ಕೊಡುತ್ತಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ ಎಂದರು.

ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ‌ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page