Wednesday, July 3, 2024

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿಗೆ ʼನೀಟ್‌’ ಪರೀಕ್ಷೆ ಬೇಡವೇ ಬೇಡ: ನಟ ವಿಜಯ್

ಚೆನ್ನೈ: ‘ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಪರೀಕ್ಷೆಗಳ ಮೇಲೆ ನಮ್ಮ ತಮಿಳುನಾಡಿನ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ನೀಟ್‌ ಪರೀಕ್ಷೆಗಳು ಅಗತ್ಯವಿಲ್ಲ. ತಮಿಳುನಾಡಿಗೆ ಈ ಪರೀಕ್ಷೆಗಳಿಂದ ವಿನಾಯಿತಿ ನೀಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ನಾಯಕ, ನಟ ವಿಜಯ್ ಮನವಿ ಮಾಡಿದ್ದಾರೆ.

ಚೆನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ‘ದೇಶದ ಜನರು ‘ನೀಟ್‌’ ಪರೀಕ್ಷೆ ಬಗ್ಗೆ ನಂಬಿಕೆ ಕಳೆದುಕೊಂಡಿದ್ದರಿಂದ ನೀಟ್ ಪರೀಕ್ಷೆಯಿಂದ ವಿನಾಯಿತಿ ಪಡೆಯುವುದು ಅನಿವಾರ್ಯ’ ಎಂದರು.

ಈಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾದ ‘ನೀಟ್‌’ ವಿರುದ್ಧದ ನಿರ್ಣಯವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಜತೆಗೆ, ತಮಿಳುನಾಡಿನ ಜನರ ಭಾವನೆಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ. ಸಂವಿಧಾನದ ಕೆಲವು ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ವಿಜಯ್ ಒತ್ತಾಯಿಸಿದ್ದಾರೆ.

ತಮಿಳುನಾಡು ವಿದ್ಯಾರ್ಥಿಗಳಿಗೆ ನೀಟ್‌ನಿಂದ ವಿನಾಯಿತಿ ನೀಡುವ ಸಂಬಂಧ ಇತ್ತೀಚೆಗೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಈ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಆರ್‌.ಎನ್‌.ರವಿ ವಿಳಂಬ ಮಾಡುತ್ತಿದ್ದಾರೆ. ಅವರ ವಿರುದ್ಧ ಡಿಎಂಕೆ ಇತ್ತೀಚೆಗೆ ವಾಗ್ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸ್ಟಾಲಿನ್‌ ಅವರು ಪ್ರಧಾನಿ ಮುಂದೆ ಈ ಬೇಡಿಕೆ ಮಂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Related Articles

ಇತ್ತೀಚಿನ ಸುದ್ದಿಗಳು