ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ತೆರಿಗೆ ದರ ಎಷ್ಟಿರಬೇಕು ಎಂದು ರಾಜ್ಯಗಳು ಸೂಚಿಸಿದರೆ ಈ ಚರ್ಚೆಯನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ ಎಂದು ಅವರು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದನ್ನು ಹಲವು ರಾಜ್ಯಗಳು ವಿರೋಧಿಸುತ್ತಿರುವ ಸಂದರ್ಭದಲ್ಲೇ ಕೇಂದ್ರ ಹಣಕಾಸು ಸಚಿವರು ಈ ಹೇಳಿಕೆ ನೀಡಿರುವುದು ಗಮನಾರ್ಹ.
ಜಿಎಸ್‌ಟಿ ಕೌನ್ಸಿಲ್‌ನ 53ನೇ ಸಭೆ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಲವು ರಾಜ್ಯಗಳ ಉಪಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು, ಹಣಕಾಸು ಕಾರ್ಯದರ್ಶಿಗಳು ಮತ್ತು ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ನಂತರ ಕೇಂದ್ರ ಹಣಕಾಸು ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಂಧನ ಮೂಲಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ರಾಜ್ಯಗಳಿಗೆ ಹೆಚ್ಚಿನ ತೊಂದರೆಯಾಗಲಿದೆ ಮತ್ತು ಅವರು ಹಣಕ್ಕಾಗಿ ಕೇಂದ್ರವನ್ನು ಅವಲಂಬಿಸಬೇಕಾಗುತ್ತದೆ ಎಂಬುದು ರಾಜ್ಯಗಳ ವಾದ. ಈ ನಿಟ್ಟಿನಲ್ಲಿ ಜಿಎಸ್‌ಟಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿಲ್ಲ ಎಂದು ರಾಜ್ಯಗಳು ವಾದಿಸುತ್ತಿವೆ ಸೀತಾರಾಮನ್ ಹೇಳಿದ್ದಾರೆ.
ಆಗಸ್ಟ್‌ನಲ್ಲಿ ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ದರಗಳ ತರ್ಕಬದ್ಧಗೊಳಿಸುವಿಕೆಯ ಕುರಿತು ಸಚಿವರ ಗುಂಪು (ಜಿಒಎಂ) ಚರ್ಚೆ ಮಾಡುತ್ತದೆ ಎಂದು ಅವರು ಹೇಳಿದರು. ಮಧ್ಯಂತರ ಬಜೆಟ್‌ನಲ್ಲಿ ಬಡ್ಡಿ ರಹಿತ ಕ್ಯಾಪೆಕ್ಸ್ ಸಾಲವನ್ನು 1.30 ಲಕ್ಷ ಕೋಟಿಗೆ ಹೆಚ್ಚಿಸುವಂತೆ ರಾಜ್ಯಗಳು ಕೇಳಿಕೊಂಡಿವೆ ಎಂದು ಕೇಂದ್ರ ಸಚಿವರು ಹೇಳಿದರು.