ರೇಣುಕಾಸ್ವಾಮಿ ಪ್ರಕರಣ : ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧದ ಅರ್ಜಿ ವಜಾ; ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಹಾಗೂ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಯಲ್ಲಿ ಕಾನೂನುಬದ್ಧ ನಿಯಮಗಳನ್ನು ಪಾಲಿಸಿಲ್ಲ ಹಾಗೂ ಅವರು ಅಪ್ರೂವರ್ ಆಗಲು ಅರ್ಹರಲ್ಲ ಎಂದು ಆಕ್ಷೇಪಿಸಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಕರ್ನಾಟಕ ಹೈಕೋರ್ಟ್ ಕೂಡ ಇದೇ ಆಕ್ಷೇಪಣೆಯನ್ನು ತಿರಸ್ಕರಿಸಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಮುಂದುವರಿಸಲು ಅವಕಾಶ ನೀಡಿದ್ದವು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಕೈಗೊಂಡಿರುವ ನಿರ್ಧಾರದಲ್ಲಿ ಕಾನೂನುಬಾಹಿರತೆ ಕಂಡುಬರುತ್ತಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರದೋಷ್ ಅವರ ಹೇಳಿಕೆ ದಾಖಲಿಸಿರುವ ವಿಧಾನ ಹಾಗೂ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿದ ಪ್ರಕ್ರಿಯೆ ಕುರಿತು ಆಕ್ಷೇಪಣೆಗಳನ್ನು ಮುಂದಿಟ್ಟಿದ್ದರು. ಆದರೆ, ವಿಚಾರಣೆಯ ಸಂದರ್ಭದಲ್ಲಿ ಮಾಫಿ ಸಾಕ್ಷಿಯನ್ನು ಪಾಟೀ ಸವಾಲಿಗೆ ಒಳಪಡಿಸಲು ಆರೋಪಿಗಳಿಗೆ ಸಂಪೂರ್ಣ ಅವಕಾಶವಿದೆ ಎಂಬ ಅಂಶವನ್ನು ನ್ಯಾಯಪೀಠ ಪರಿಗಣಿಸಿದೆ.

ಈ ನಡುವೆ ಪ್ರದೋಷ್ ಈಗಾಗಲೇ ನಾಲ್ಕು ದಿನಗಳ ಕಾಲ ನ್ಯಾಯಾಲಯದ ಮುಂದೆ ಸಾಕ್ಷ್ಯ ದಾಖಲಿಸಿದ್ದು, ಅವರ ವಿಚಾರಣೆ ಹಾಗೂ ಸಂಬಂಧಿತ ದಾಖಲೆಗಳ ಗುರುತು ಮಾಡುವ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಪ್ರದೋಷ್ ಸಾಕ್ಷ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ, ಅವರ ಹೇಳಿಕೆ ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆದುಕೊಳ್ಳುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು