ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 75(2) ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಶಹಾಪುರ ಸಿಡಿಪಿಒ ಮಲ್ಲಣ್ಣ ಉಮಾಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ವೈರಲ್ ಆಗಿರುವ ವಿಡಿಯೋದಲ್ಲಿ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ದೃಶ್ಯಗಳು ಕಾಣಿಸುತ್ತವೆ ಎನ್ನಲಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ನೈಜತೆ ಹಾಗೂ ಘಟನೆಗೆ ಸಂಬಂಧಿಸಿದ ಇತರ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇದೇ ವೇಳೆ, ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವನೆಂದು ಪರಿಚಿತನಾಗಿರುವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ, ವೈರಲ್ ವಿಡಿಯೋ ಪರಿಶೀಲಿಸಿ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ಮುಂದುವರೆದಿದ್ದು, ಸಂಬಂಧಿತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಮುಂದಿನ ಬೆಳವಣಿಗೆಗಳಿಗಾಗಿ ಕಾದು ನೋಡಲಾಗುತ್ತಿದೆ.
