ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಧ್ವೇಷ ಭಾಷಣ ಮಾಡಿದ ಚಂದ್ರಶೇಖರ ಸ್ವಾಮಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ, ಇದೀಗ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆ ಹಾಜರಾಗಿ ಎಂದು ಸ್ವಾಮಿಗೆ ನೋಟಿಸ್ ನೀಡಿದ್ದಾರೆ.
ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಂದು ಬೆಳಿಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 299 ರ ಅಡಿ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಿಸಾನ್ ಸಂಘ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸ್ವಾಮಿ, ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕು ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಹೇಳಿಕೆಯನ್ನು ಪ್ರಶ್ನಿಸಿ, ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲು ಕಾರಣರಾದ ಚಂದ್ರಶೇಖರ ಸ್ವಾಮಿ ವಿರುದ್ದ ಬೆಂಗಳೂರಿನ ಚಾಮರಾಜಪೇಟೆ ನಿವಾಸಿ ಸೈಯದ್ ಎಂಬುವವರು ದೂರು ನೀಡಿದ್ದರು. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಹೊರಡಿಸಲಾಗಿದೆ.