ವಿವಾದಾತ್ಮಕ ಭಾಷಣ : ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಕ್ರಿಮಿನಲ್ ಪ್ರಕರಣ ರದ್ದತಿಗೆ ಅರ್ಜಿ ತಿರಸ್ಕಾರ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ವಿವಾದಾತ್ಮಕ ಭಾಷಣದ ಮೂಲಕ ಕೋಮು ಸೌಹಾರ್ದಕ್ಕೆ ಧಕ್ಕೆ ತಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರೊಂದಿಗೆ ಅರ್ಜಿ ಸಲ್ಲಿಸಿದ್ದ ಕರಣ್ ಸಿ. ಸುಬೇದಾರ್, ಶಿವಕುಮಾರ್ ಮತ್ತು ಗುರುರಾಜ್ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಪ್ರತಾಪ್ ಸಿಂಹ ಅವರ ಭಾಷಣದಲ್ಲಿನ ಕೆಲವು ನಿರ್ದಿಷ್ಟ ಹೇಳಿಕೆಗಳು ಗಲಭೆಗೆ ಪ್ರಚೋದನೆ ನೀಡುವ ಹಾಗೂ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರುವ ಸ್ವರೂಪ ಹೊಂದಿವೆ ಎಂಬುದು ನ್ಯಾಯಪೀಠದ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಯಬೇಕೆಂದು ನ್ಯಾಯಾಲಯ ಸೂಚಿಸಿದೆ.
ಆದರೆ, ಪ್ರತಾಪ್ ಸಿಂಹ ಅವರು ವಿವಾದಾತ್ಮಕ ಹೇಳಿಕೆ ನೀಡುವಂತೆ ಇತರ ಮೂವರು ಆರೋಪಿಗಳು ಪ್ರಚೋದನೆ ನೀಡಿದ್ದರು ಎಂಬುದನ್ನು ಸಾಬೀತುಪಡಿಸುವಂತಹ ಸಾಕ್ಷ್ಯಾಧಾರಗಳು ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಹೀಗಾಗಿ ಅವರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ಅಂತ್ಯ ಹಾಡಿದೆ.
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಷಣ ವಿವಾದ
2024ರ ಸೆಪ್ಟೆಂಬರ್ 21ರಂದು ಶಹಾಪುರದಲ್ಲಿ ಗಣೇಶ ವಿಸರ್ಜನೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ನಡೆಯುವ ಕಲ್ಲು ತೂರಾಟದ ಕುರಿತು ಮಾತನಾಡಿದ್ದ ಅವರು, ಈದ್ ಮಿಲಾದ್ ಮೆರವಣಿಗೆಗಳಲ್ಲಿ ಹಿಂದೂಗಳು ಕಲ್ಲು ತೂರಿದ ಉದಾಹರಣೆ ಇದೆಯೇ ಎಂದು ಪ್ರಶ್ನಿಸಿದ್ದರು.
ಅಲ್ಲದೆ, ದೇಶದ ಜನಸಂಖ್ಯೆಯಲ್ಲಿ ಹಿಂದೂಗಳ ಪ್ರಮಾಣ ಶೇ.80ರಷ್ಟಿದ್ದು, ಅವರೂ ಕಲ್ಲುಗಳನ್ನು ಕೈಗೆತ್ತಿಕೊಂಡರೆ ಪರಿಸ್ಥಿತಿ ಹೇಗಿರಬಹುದು ಎಂಬರ್ಥದ ಹೇಳಿಕೆ ನೀಡಿದ್ದರು. ಈ ಮಾತುಗಳು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ಸಾಧ್ಯತೆಯಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 299 ಮತ್ತು 192ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಪ್ರತಾಪ್ ಸಿಂಹ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಪ್ರಕರಣದ ತನಿಖೆ ಮುಂದುವರಿಯುವಂತಾಗಿದೆ.
Peepal Media Desk
Peepal Media · ಕ್ರೈಂ ವಿಭಾಗ