ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರ್ನಾಟಕ ಸರ್ಕಾರದ ಕಾರ್ಯನಿರ್ವಹಣಾ ನಿಯಮಾವಳಿಗಳ ಅನ್ವಯ ಮುಖ್ಯಮಂತ್ರಿ ಅವರ ಸಲಹೆಯ ಮೇರೆಗೆ ವಿವಿಧ ಸಚಿವರಿಗೆ ಇಲಾಖೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.
ಅಧಿಸೂಚನೆಯ ಪ್ರಕಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು, ಸಚಿವ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗುಪ್ತಚರ ಇಲಾಖೆ ಸೇರಿದಂತೆ ಹಂಚಿಕೆ ಮಾಡದ ಎಲ್ಲಾ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಹಾಗೂ ಕ್ರೀಡಾ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ.
ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕೆ.ಜೆ. ಜಾರ್ಜ್ ಅವರಿಗೆ ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ, ಎಂ.ಬಿ. ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗಳನ್ನು ಹಂಚಿಕೆ ಮಾಡಲಾಗಿದೆ.
ಇದೇ ವೇಳೆ ರಾಮಲಿಂಗಾರೆಡ್ಡಿ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಸತೀಶ್ ಜಾರಕಿಹೊಳಿ ಅವರಿಗೆ ಈ ಹಿಂದೆಯೇ ಇದ್ದ ಪಿಡಬ್ಲ್ಯೂಡಿ, ಕೃಷ್ಣ ಬೈರೇಗೌಡ ಅವರಿಗೆ ಮಹಾನಗರ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಬಿಬಿಎಂಪಿ, ಬಿಡಿಎ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ ಸೇರಿದಂತೆ ಪ್ರಮುಖ ನಗರಾಭಿವೃದ್ಧಿ ಸಂಸ್ಥೆಗಳ ಜವಾಬ್ದಾರಿ ನೀಡಲಾಗಿದೆ.
ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಇಲಾಖೆ (ಗುಪ್ತಚರ ಹೊರತುಪಡಿಸಿ), ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಇಲಾಖೆ, ಯು.ಟಿ. ಖಾದರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈಶ್ವರ ಖಂಡ್ರೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಂಚಿಕೆ ಮಾಡಲಾಗಿದೆ.
ಇನ್ನೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕೆ.ಯು.ಐ.ಡಿ.ಎಫ್.ಸಿ. ಸೇರಿದಂತೆ ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳ ಜವಾಬ್ದಾರಿ ನೀಡಲಾಗಿದೆ.
ಬೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ, ಶರಣ ಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳ ಹೊಣೆಗಾರಿಕೆ ನೀಡಲಾಗಿದೆ.
ಹೊಸ ಸರ್ಕಾರದ ಮೊದಲ ಖಾತೆ ಹಂಚಿಕೆ ಮೂಲಕ ಆಡಳಿತ ಯಂತ್ರಕ್ಕೆ ಸ್ಪಷ್ಟ ದಿಕ್ಕು ನೀಡಲು ಸರ್ಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಕಾರ್ಯಚಟುವಟಿಕೆಗಳು ಮತ್ತಷ್ಟು ವೇಗ ಪಡೆಯುವ ನಿರೀಕ್ಷೆ ವ್ಯಕ್ತವಾಗಿದೆ.
