ಬೆಂಗಳೂರು: ಮುಂದೂಡಿಕೆಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಗೆ ಇದೀಗ ಹೊಸ ದಿನಾಂಕ ನಿಗದಿಯಾಗಿದೆ. 2026ನೇ ಸಾಲಿನ 22ನೇ ಸಚಿವ ಸಂಪುಟ ಸಭೆ ಅಕ್ಟೋಬರ್ 6ರಂದು ನಡೆಯಲಿದೆ.
ವಿಧಾನಸೌಧದಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಅಕ್ಟೋಬರ್ 6ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಅಧಿಕೃತ ಸೂಚನಾ ಪತ್ರ ಹೊರಡಿಸಿದ್ದಾರೆ.
ಸಭೆಗೆ ಸಂಬಂಧಿಸಿದ ಕಾರ್ಯಸೂಚಿಯನ್ನು ಈಗಾಗಲೇ ಸಂಪುಟದ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಂಪುಟದ ಎಲ್ಲ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೂ ಸಭೆಯ ಕುರಿತು ಮಾಹಿತಿ ನೀಡಲಾಗಿದೆ.
ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಆಡಳಿತಾತ್ಮಕ ವಿಚಾರಗಳು, ನೀತಿ ನಿರ್ಧಾರಗಳು ಹಾಗೂ ವಿವಿಧ ಇಲಾಖೆಗಳ ಪ್ರಸ್ತಾವನೆಗಳು ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಕಾರ್ಯಸೂಚಿ ಸಚಿವರು ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
