ಹಾಸನದಲ್ಲಿ ಅಶ್ಲೀಲ ಪೆನ್ ಡ್ರೈವ್ ಗಳನ್ನು0 ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಾಸನದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಗುರುವಾರ ಹಿಂಪಡೆದರು.
ಪ್ರೀತಂ ಗೌಡ ಅವರ ವಕೀಲ ಸಂದೀಪ್ ಪಾಟೀಲ್ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿ ಹಿಂಪಡೆಯುವ ಸಂಬಂಧ ಮೆಮೊ ಸಲ್ಲಿಕೆ ಮಾಡಲಾಗಿದೆ ಎಂದರು.
ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ ಎಂಬ ದೂರಿನನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿದಂತೆ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 354ಎ, 354ಡಿ, 354ಬಿ ಮತ್ತು 506ರ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67, 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರನ್ನು ಆಧರಿಸಿದ ಈ ಪ್ರಕರಣ ರದ್ದತಿಗೆ ಪ್ರೀತಂ ಗೌಡ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದೆ.
ಪ್ರೀತಂ ಗೌಡ ಅವರ ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಮುಕ್ತವಾಗಿರಿಸಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.
ಪ್ರೀತಮ್ ಗೌಡ ಅರ್ಜಿಯನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಪ್ರೀತಮ್‌ರನ್ನು ಬಂಧಿಸದಂತೆ ಒದಗಿಸಿದ್ದ ರಕ್ಷಣೆಯು ಸಹ ಇಲ್ಲವಾಗಿದೆ. ಹೀಗಾಗಿ ಪ್ರಕರಣದ ಸಂಬಂಧ ಏನೇ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬಂಧನದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.