ಸೊರಬ: ರಾಜ್ಯದಲ್ಲಿ (Soraba) ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಒಟ್ಟು 1,200 ಕರ್ನಾಟಕ ಪಬ್ಲಿಕ್ ಶಾಲೆಗಳ (KPS Schools) ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ಮೊದಲ ಹಂತವಾಗಿ 1,000 ಶಾಲೆಗಳು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿವೆ ಎಂದುಸಚಿವ ಎಸ್. ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಸೊರಬ ತಾಲ್ಲೂಕಿನ ಹಿರೇಕಲಗೋಡು, ಹರೀಶಿ ಹಾಗೂ ಈಡೂರು ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ, ಡಾಂಬರೀಕರಣ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ದಾಖಲಾತಿ ಹೆಚ್ಚಳಕ್ಕೆ ಒತ್ತು
ರಾಜ್ಯದ ವಿವಿಧ ಭಾಗಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ದಾಖಲಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಬದ್ಧವಾಗಿದ್ದು, ಹೆಚ್ಚುವರಿ ಶಾಲೆಗಳ ಆರಂಭಕ್ಕಾಗಿ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ಪ್ರಕ್ರಿಯೆ ಚುರುಕಾಗಿ ನಡೆಯುತ್ತಿದೆ ಎಂದು ಸಚಿವರು ವಿವರಿಸಿದರು. ಪ್ರತಿ ಕೆಪಿಎಸ್ ಶಾಲೆಯ ಸಮಗ್ರ ಅಭಿವೃದ್ಧಿ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮೂರರಿಂದ ಏಳು ಕೋಟಿ ರೂಪಾಯಿಗಳವರೆಗೆ ಅನುದಾನ ವೆಚ್ಚ ಮಾಡಲಾಗುವುದು. ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತ್ಯೇಕವಾಗಿ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಕ್ರೀಡೆ, ಸಂಗೀತಕ್ಕೆ ಒತ್ತು ಮತ್ತು ಶಿಕ್ಷಕರ ನೇಮಕ
ಕೇವಲ ಸಾಂಪ್ರದಾಯಿಕ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿನ ಸರ್ವಾಂಗೀಣ ಪ್ರಗತಿಗಾಗಿ ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಪಠ್ಯೇತರ ಕ್ಷೇತ್ರಗಳಿಗೂ ಅಗತ್ಯವಿರುವ ವಿಶೇಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಈಗಾಗಲೇ ಸೊರಬ ತಾಲ್ಲೂಕಿಗೆ 7 ಕೆಪಿಎಸ್ ಶಾಲೆಗಳು ಅಧಿಕೃತವಾಗಿ ಮಂಜೂರಾಗಿದ್ದು, ಆದಷ್ಟು ಶೀಘ್ರದಲ್ಲೇ ಇವುಗಳನ್ನು ಲೋಕಾರ್ಪಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಶಿಕ್ಷಣ ಇಲಾಖೆಯ ಸಾಧನೆ
ರಾಜ್ಯದಲ್ಲಿ ಒಟ್ಟು 44 ಲಕ್ಷ ವಿದ್ಯಾರ್ಥಿಗಳು ಹಾಗೂ 2.50 ಲಕ್ಷ ಶಿಕ್ಷಕರಿದ್ದಾರೆ. ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ತೃಪ್ತಿಯಿದೆ ಎಂದ ಸಚಿವರು, ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಜರುಗಲಿದೆ ಎಂದು ತಿಳಿಸಿದರು. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಮುಖಂಡರಾದ ತಬಲಿ ಬಂಗಾರಪ್ಪ, ಎಂ.ಡಿ. ಶೇಖರ್, ಅಣ್ಣಪ್ಪ ಹಾಲಘಟ್ಟ, ಸುನೀಲ್ ಗೌಡ, ತಹಶೀಲ್ದಾರ್ ಕೆ. ಪುರಂದರ್, ತಾ.ಪಂ. ಇಒ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಆರ್. ಸೇರಿದಂತೆ ಬೂತ್ ಅಧ್ಯಕ್ಷರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
