Home ರಾಜ್ಯ ಡೀಸೆಲ್ ದರ ಏರಿಕೆ ಹೊರೆ: ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ, ಸಧ್ಯದಲ್ಲೇ ಜಾರಿಗೆ

ಡೀಸೆಲ್ ದರ ಏರಿಕೆ ಹೊರೆ: ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ, ಸಧ್ಯದಲ್ಲೇ ಜಾರಿಗೆ

0

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ರಚಿಸಲಾಗಿರುವ ತಜ್ಞರ ಸಮಿತಿ ವರದಿ ಸಲ್ಲಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದು, ಅದರ ಪರಿಣಾಮ ರಾಜ್ಯ ಸಾರಿಗೆ ನಿಗಮಗಳ ಮೇಲೂ ಬಿದ್ದಿದೆ. ಡೀಸೆಲ್ ದರ ನಿರಂತರ ಏರಿಕೆಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಗಳಿಗೆ ಭಾರೀ ಆರ್ಥಿಕ ಹೊರೆ ಉಂಟಾಗಿದೆ.

ಸಾರಿಗೆ ನಿಗಮಗಳ ಅಧಿಕಾರಿಗಳ ಪ್ರಕಾರ, ಡೀಸೆಲ್ ದರ ಹೆಚ್ಚಳದಿಂದ ತಿಂಗಳಿಗೆ ಸುಮಾರು 40 ಕೋಟಿ ರೂ. ಹೆಚ್ಚುವರಿ ವೆಚ್ಚವಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕವಾಗಿ ಸುಮಾರು 480 ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ನಿಗಮಗಳು ಸರ್ಕಾರದ ಗಮನಕ್ಕೆ ತಂದಿವೆ.

ಮೂಲಗಳ ಪ್ರಕಾರ, ಕೆಎಸ್‌ಆರ್‌ಟಿಸಿ ಶೇಕಡಾ 33ರಷ್ಟು ಹಾಗೂ ಬಿಎಂಟಿಸಿ ಶೇಕಡಾ 44ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಆದರೆ ದರ ಏರಿಕೆ ಕುರಿತು ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್, ಕಳೆದ ಕೆಲವು ತಿಂಗಳುಗಳಲ್ಲಿ ಡೀಸೆಲ್ ದರ ಆರು ಬಾರಿ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೆ ವಾರಕ್ಕೆ 7ರಿಂದ 8 ಕೋಟಿ ರೂ.ವರೆಗೆ ಹೆಚ್ಚುವರಿ ನಷ್ಟ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದೀಗ ದರ ಪರಿಷ್ಕರಣೆ ಕುರಿತಂತೆ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ಕುಮಾರ್ ತಿವಾರಿ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ. ಸಮಿತಿಯಲ್ಲಿ ದ್ವಾರಕನಾಥ್ ಬಾಬು, ನಿವೃತ್ತ ಸರ್ಕಾರಿ ಕಾರ್ಯದರ್ಶಿ ಡಾ. ಅಬ್ದುಲ್ ಪಿಂಜರಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಪ್ರತಿನಿಧಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಮಿತಿ ಈಗಾಗಲೇ ನಾಲ್ಕು ಸಾರಿಗೆ ನಿಗಮಗಳಿಗೆ ಭೇಟಿ ನೀಡಿ ಆರ್ಥಿಕ ಪರಿಸ್ಥಿತಿ, ಕಾರ್ಯಾಚರಣಾ ವೆಚ್ಚ ಹಾಗೂ ಆದಾಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶೀಘ್ರದಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ವರದಿ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಬಸ್ ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

You cannot copy content of this page

Exit mobile version