ಕೋಮುವಾದಿ ಧೋರಣೆಗಳಿಂದ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದ, ಹಾಗೂ ‘ರಾಷ್ಟ್ರಪಡೆ’ ಎಂಬ ಸಂಘಟನೆ ಮೂಲಕ ಗುರುತಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಎಂಬುವವನನ್ನು ಮೌಲ್ವಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಶುಕ್ರವಾರ ಹಾಸನದಲ್ಲಿ ಬಂಧಿಸಿದ್ದಾರೆ.
ಸಹೋದರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹಾಸನಕ್ಕೆ ತೆರಳಿದ್ದ ಬೆಂಗಳೂರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಮೌಲ್ವಿಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಕ್ತಾರ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಅವರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಯಿಂದ ಹೇಳಿಕೆ ಪಡೆದು, ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಗಮನಾರ್ಹವಾಗಿ, ಈ ಹಿಂದೆಯೂ ವಿವಿಧ ಪ್ರಕರಣಗಳಲ್ಲಿ ಪುನೀತ್ ಕೆರೆಹಳ್ಳಿ ಬಂಧನಕ್ಕೊಳಗಾಗಿದ್ದರು. ಅಕ್ರಮ ಬಾಂಗ್ಲಾದೇಶಿ ವಲಸಿಗರ ಶೆಡ್‌ಗಳಿಗೆ ನುಗ್ಗಿ ದಾಖಲೆಗಳನ್ನು ಪರಿಶೀಲಿಸುವುದು, ಬೆದರಿಕೆ ಹಾಕಿದ ಆರೋಪ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಮೌಲ್ವಿಗಳ ವಿರುದ್ಧ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಂಧನವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ವಿಚಾರಣೆ ತೀವ್ರವಾಗುವ ಸಾಧ್ಯತೆ ಇದೆ.
