Home ದೇಶ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ 3 ಪ್ರತ್ಯೇಕ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ 3 ಪ್ರತ್ಯೇಕ ಎಫ್‌ಐಆರ್ ದಾಖಲು

0

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬುಧವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರ ವಿರುದ್ಧ ದೆಹಲಿ ಪೊಲೀಸರು ಗುರುವಾರ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡಲು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ನೂಕಾಟ, ಎಳೆದಾಟ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆಯ ಸರಣಿ ಬೆಳವಣಿಗೆಗಳನ್ನು ಪತ್ತೆಹಚ್ಚಲು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೈಮಾಡಿದವರನ್ನು ಗುರುತಿಸಲು ಪ್ರತಿಭಟನಾ ಸ್ಥಳದ ವಿಡಿಯೋ ತುಣುಕುಗಳನ್ನು ಪೊಲೀಸರು ತೀವ್ರ ಪರಿಶೀಲನೆಗೆ ಒಳಪಡಿಸುತ್ತಿದ್ದು, ಮತ್ತಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಶಾಂಗ್ರಿಲಾ ಹೋಟೆಲ್ ಹಾಗೂ ಜಂತರ್ ಮಂತರ್ ಮಾರ್ಗದಲ್ಲಿ ‘ಇಂಡಿಯಾ’ ಒಕ್ಕೂಟದ ಸಂಸದರನ್ನು ತಡೆದಾಗ ಪೊಲೀಸರು ಮತ್ತು ನಾಯಕರ ನಡುವೆ ತೀವ್ರ ಘರ್ಷಣೆ ನಡೆದಿತ್ತು.

ಈ ವೇಳೆ ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದು ಬಾರಾಖಂಬಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ನಡುರಸ್ತೆಯಲ್ಲೇ ಮಲಗಿ ಪ್ರತಿಭಟಿಸಿದ್ದ ಪ್ರಿಯಾಂಕಾ ಗಾಂಧಿಯವರನ್ನು ಛತ್ರಸಾಲ್ ಕ್ರೀಡಾಂಗಣದ ತಾತ್ಕಾಲಿಕ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಮಂಗಳವಾರವಷ್ಟೇ ಆಕಾಶವಾಣಿ ಭವನದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದಡಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದ ಬೆನ್ನಲ್ಲೇ ಇದೀಗ ಮತ್ತಷ್ಟು ಎಫ್‌ಐಆರ್‌ಗಳು ಜಡಿಯಲ್ಪಟ್ಟಿವೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಬೀದಿಗೆ ಇಳಿಯಲು ಸದಾ ಸಿದ್ಧ. ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡುವವರೆಗೂ ಈ ಪ್ರತಿಭಟನೆ ನಿಲ್ಲುವುದಿಲ್ಲ. ನನ್ನ ವಿರುದ್ಧ ಈಗಾಗಲೇ 45 ಎಫ್‌ಐಆರ್‌ಗಳಿವೆ, ಆ ಸಂಖ್ಯೆ 100 ಮುಟ್ಟಿದರೂ ಹೆದರುವುದಿಲ್ಲ. ಪ್ರತಿಯೊಂದು ಎಫ್‌ಐಆರ್ ನನ್ನ ಎದೆಯ ಮೇಲಿನ ಪದಕವಿದ್ದಂತೆ” ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ಇತ್ತ ಪೊಲೀಸ್ ವಾಹನದಿಂದಲೇ ಸಂವಿಧಾನದ ಪ್ರತಿಯನ್ನು ಎತ್ತಿ ಹಿಡಿದು ಮಾತನಾಡಿದ್ದ ಪ್ರಿಯಾಂಕಾ ಗಾಂಧಿ, “ಸಂವಿಧಾನದ ರಕ್ಷಣೆಗಾಗಿ ನಾವು ಪ್ರಾಣವನ್ನಾದರೂ ಕೊಡಲು ಸಿದ್ಧ” ಎಂದು ಹೇಳಿದ್ದರು.

You cannot copy content of this page

Exit mobile version