ಜೈಪುರ (ರಾಜಸ್ಥಾನ): ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೌಸಾ-ಮನೋಹರಪುರ ರಸ್ತೆಯ ಬಾಪಿ ಸಮೀಪದಲ್ಲಿ ವ್ಯಾನ್ ಮತ್ತು ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ, 11 ಜನರು ಸಾವಿಗೀಡಾಗಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡ 15 ಜನರನ್ನು ಜೈಪುರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಗಾಯಗೊಂಡವರ ಪೈಕಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರಲ್ಲಿ ಏಳು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಈ ಯಾತ್ರಾರ್ಥಿಗಳು ಉತ್ತರ ಪ್ರದೇಶದ ಎಟಾವಾ ಜಿಲ್ಲೆಯವರಾಗಿದ್ದು, ಖಾಟೂಶ್ಯಾಮ್‌ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದರು.
ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕ್ರೇನ್ ಸಹಾಯದಿಂದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ.
ಈ ಘಟನೆಗೆ ಅತಿವೇಗವೇ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.