ಬೆಂಗಳೂರು: ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಎರಡನೇ ದಿನಕ್ಕೇ ಈ ಬಿಕ್ಕಟ್ಟು ಉದ್ಭವಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
13 ಸಚಿವರಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ರಾಮಲಿಂಗಾ ರೆಡ್ಡಿ ಅವರು ಬೆಂಗಳೂರು ಅಭಿವೃದ್ಧಿ ಖಾತೆಯ ನಿರೀಕ್ಷೆಯಲ್ಲಿದ್ದರು. ಆ ಖಾತೆ ನೀಡುವ ಭರವಸೆಯನ್ನೂ ಅವರಿಗೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಅಂತಿಮವಾಗಿ ಆ ಖಾತೆಯನ್ನು ಸಚಿವ ಕೃಷ್ಣ ಬೈರೇಗೌಡ ಅವರಿಗೆ ನೀಡಲಾಯಿತು. ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದ್ದು, ಆ ಖಾತೆಯ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ತಿಳಿದುಬಂದಿದೆ.
ಸಿಎಂಗೆ ಫೋನ್, ರಾಜೀನಾಮೆ ಎಚ್ಚರಿಕೆ
ಗುರುವಾರ ರಾತ್ರಿ ಖಾತೆ ಅಧಿಕೃತವಾಗಿ ಪ್ರಕಟವಾದ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಫೋನ್ ಮಾಡಿ ರಾಜೀನಾಮೆ ಸಲ್ಲಿಸುವ ಇಚ್ಛೆ ವ್ಯಕ್ತಪಡಿಸಿದರು. ಸಿಎಂ ಶಿವಕುಮಾರ್, ರೆಡ್ಡಿ ಅವರನ್ನು ಸಮಾಧಾನ ಪಡಿಸುವ ಯತ್ನ ಮಾಡಿ, ತಾವು ಎಐಸಿಸಿ ನಾಯಕರೊಂದಿಗೆ ಚರ್ಚಿಸಿದ್ದಾಗಿ ತಿಳಿಸಿದರು. ಆದರೆ ಹೈಕಮಾಂಡ್ ಖಾತೆ ಬದಲಾವಣೆಗೆ ಒಪ್ಪಿಲ್ಲ ಎಂದೂ ಸ್ಪಷ್ಟಪಡಿಸಿದರು. ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬರಬೇಡಿ, ಮಾತುಕತೆ ನಡೆಸೋಣ ಎಂದು ಮನವಿ ಮಾಡಿದರು.
ಸಿದ್ದರಾಮಯ್ಯ ಮಧ್ಯಪ್ರವೇಶ
ಖಾತೆ ಗೊಂದಲ ಬಗೆಹರಿಸಲು ಸಿಎಂ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನೆರವು ಕೋರಿದ್ದಾರೆ. ರೆಡ್ಡಿ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ ಇದುವರೆಗೂ ಪರಿಹಾರ ದೊರಕಿಲ್ಲ.
ರಾಷ್ಟ್ರೀಯ ನಾಯಕರ ಮಧ್ಯಸ್ಥಿಕೆ ನಿರೀಕ್ಷೆ
ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಆ ಸಂದರ್ಭದಲ್ಲಿ ಖರ್ಗೆ ಅವರು ರೆಡ್ಡಿ ಜೊತೆ ನೇರ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬಹುದು ಎಂಬ ನಿರೀಕ್ಷೆ ಇದೆ.
ಸದ್ಯ ರಾಮಲಿಂಗಾ ರೆಡ್ಡಿ ತಮ್ಮ ನಿಲುವು ಬದಲಿಸಿಲ್ಲ. ಖಾತೆ ಬದಲಾಯಿಸಿದರೆ ಮಾತ್ರ ಸಚಿವ ಸ್ಥಾನದಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಈ ಬಿಕ್ಕಟ್ಟನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕರ್ನಾಟಕದ ರಾಜಕೀಯ ವಲಯದ ಕುತೂಹಲಕ್ಕೆ ಕಾರಣವಾಗಿದೆ.
