ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರನ್ಯಾ ರಾವ್ ಬಂಧನದ ನಂತರ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ಚಿನ್ನ ಸಾಗಾಟದಲ್ಲಿ ಪೊಲೀಸರ ಪಾತ್ರದ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಡಿಜಿಪಿ ರಾಮಚಂದ್ರ ರಾವ್ ಅವರ ಮೇಲೂ ತನಿಖೆಗೆ ಗೃಹ ಇಲಾಖೆ ಆದೇಶಿಸಿದೆ.
ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಗೃಹ ಇಲಾಖೆ ತನಿಖಾ ತಂಡಕ್ಕೆ ಸೂಚಿಸಿದೆ.
ನಟಿ ರನ್ಯಾ ರಾವ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.
ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜ್ ನನ್ನು ಡಿಆರ್ಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ. ರನ್ಯಾ ಬಂಧನಕ್ಕೊಳಗಾದ ದಿನ ಶಿಷ್ಟಾಚಾರ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಬಸವರಾಜ್ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ತನಿಖೆ ಚುರುಕುಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.