ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ಜೈಲುಪಾಲಾಗಿ, ಗುರುವಾರ ಸಂಜೆಯಷ್ಟೇ ಬಿಡುಗಡೆ ಆಗಿದ್ದ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಶಾಸಕ ಮುನಿರತ್ನನನ್ನು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ.
ಆ ನಂತರ ಆ 7 ಮಂದಿಯ ಮೇಲೂ ಪ್ರಕರಣ ದಾಖಲು ಮಾಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣದ ಇಂಚಿಂಚೂ ಮಾಹಿತಿ ಜಾಲಾಡಿರುವ ಪೊಲೀಸರಿಗೆ ಅತ್ಯಾಚಾರ ಎಸಗಿರುವ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ ಎಂದು ತಿಳಿದು ಬಂದಿದೆ.