Wednesday, March 5, 2025

ಸತ್ಯ | ನ್ಯಾಯ |ಧರ್ಮ

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ: ನಟ, ರಾಜಕಾರಣಿ ವಿಜಯ್

ಚೆನ್ನೈ: ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಇದನ್ನು ನಾವು ಎಂದಿಗೂ ಒಪ್ಪುವುದಿಲ್ಲ ಎಂದು ಖ್ಯಾತ ನಟ ಮತ್ತು ತಮಿಳು ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಹೇಳಿದ್ದಾರೆ.

ವಿಜಯ್ ಇತ್ತೀಚಿನ ಡಿಲಿಮಿಟೇಷನ್‌ ಕುರಿತಾದ ನಿರ್ಣಯಕ್ಕೆ ಪ್ರತಿಕ್ರಿಯಿಸಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಜನಗಣತಿ ಆಧರಿಸಿ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ನಡೆದರೆ, ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯ ಗಣನೀಯವಾಗಿ ಕಡಿಮೆಯಾಗುವ ಅಪಾಯವಿದೆ. ಇದನ್ನು ತಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕಳೆದ 50 ವರ್ಷಗಳಲ್ಲಿ, ತಮಿಳುನಾಡು ಸೇರಿದಂತೆ ಇತರ ದಕ್ಷಿಣ ರಾಜ್ಯಗಳು ಜನಸಂಖ್ಯಾ ಬೆಳವಣಿಗೆಯನ್ನು ನಿಯಂತ್ರಿಸಿವೆ. ಹೀಗಾಗಿ ಪ್ರಸ್ತುತ ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ವಿಭಜಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಕ್ಷೇತ್ರಗಳ ಪುನರ್ವಿಂಗಡಣೆ ಕುರಿತು ಕೇಂದ್ರವು ಆಯಾ ರಾಜ್ಯಗಳಿಗೆ ಸ್ಪಷ್ಟ ವಿವರಣೆಯನ್ನು ನೀಡಬೇಕೆಂದು ಅವರು ಒತ್ತಾಯಿಸಿದರು.

ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ದಕ್ಷಿಣ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾದರೂ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ಉತ್ತರದ ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾದರೆ ಅದನ್ನು ಸಹಿಸಲಾಗುವುದಿಲ್ಲ ಎಂದು ಅವರು ಘೋಷಿಸಿದರು. ಇಂತಹ ಪರಿಸ್ಥಿತಿಯನ್ನು ತಮ್ಮ ಪಕ್ಷ ಬಲವಾಗಿ ವಿರೋಧಿಸುತ್ತದೆ ಮತ್ತು ಎಲ್ಲಾ ಪಕ್ಷಗಳೊಂದಿಗೆ ಒಟ್ಟಾಗಿ ಅದರ ವಿರುದ್ಧ ಹೋರಾಡುತ್ತದೆ ಎಂದು ವಿಜಯ್ ಸ್ಪಷ್ಟಪಡಿಸಿದರು.

ಏತನ್ಮಧ್ಯೆ, ತಮಿಳುನಾಡು ಸಿಎಂ ಸ್ಟಾಲಿನ್ ಈಗಾಗಲೇ ಜನಸಂಖ್ಯೆಯ ಆಧಾರದ ಮೇಲೆ ಸಂಸತ್‌ ಕ್ಷೇತ್ರ ಮರುವಿಂಗಡಣೆ ವಿರುದ್ಧ ಎಚ್ಚರಿಕೆ ನೀಡಿದ್ದಾರೆ ಮತ್ತು ಕೇಂದ್ರವು ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದರೆ ಅದನ್ನು ವಿರೋಧಿಸುವುದಾಗಿ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page