Home ಬೆಂಗಳೂರು 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿರಲಿ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿರಲಿ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಂಬರುವ ನೇಮಕಾತಿಗಳಿಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ನೇಮಕಾತಿಯಲ್ಲಿ ದೇಶಕ್ಕೆ ನಾವು ಮಾದರಿಯಾಗಬೇಕು. 70 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ದೊಡ್ಡ ಕಾರ್ಯವನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ದೇಶಕ್ಕೆ ಮಾದರಿಯಾಗಿ ತೋರಿಸಬೇಕಾಗಿದೆ. ದೇಶಕ್ಕೆ ವಿದ್ಯಾರ್ಥಿಗಳ ಸಂದೇಶ ಈಗಾಗಲೇ ಸ್ಪಷ್ಟವಾಗಿದೆ ಎಂದರು.

ಇತರ ರಾಜ್ಯಗಳಿಗೆ ಹೋಲಿಸಿದರೆ ತಾಂತ್ರಿಕತೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದೆ. ತಾಂತ್ರಿಕತೆಯಲ್ಲಿ ನಾವು ತುಂಬಾ ಮುಂದೆ ಇದ್ದೇವೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ನೇಮಕಾತಿಯನ್ನು ಅತ್ಯಂತ ವೃತ್ತಿಪರವಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳನ್ನು ತುಂಬಲು ಕೆಪಿಎಸ್ಸಿ ಮತ್ತು ಕೆಇಎ ಈಗಾಗಲೇ ವೇಳಾಪಟ್ಟಿಯನ್ನು ಹೊರಡಿಸಿದ್ದು, ಸುಮಾರು 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆಯಿದೆ. ಪರೀಕ್ಷೆ ಪ್ರಕ್ರಿಯೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಸಮಗ್ರವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯನ್ನು ಕಟ್ಟುನಿಂದ ಪಾಲಿಸಬೇಕು. ಪರೀಕ್ಷೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಬೇಕು. ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಸುಧಾರಿಸಲು ಯುಪಿಎಸ್ಸಿಯಲ್ಲಿ ಅನುಸರಿಸುವ ಉತ್ತಮ ಅಂಶಗಳನ್ನು ಇಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳ ಜವಾಬ್ದಾರಿ. ಜಿಲ್ಲಾಧಿಕಾರಿ, ಎಸ್ಪಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರಿಗೆ ಜವಾಬ್ದಾರಿಯನ್ನು ನಿಗದಿಪಡಿಸಲಾಗಿದ್ದು, ಪ್ರತಿಯೊಬ್ಬರೂ ಅವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಬೇಕು. ಪ್ರತಿ ಹಂತವನ್ನೂ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಶಿಕ್ಷಣ ಸಂಸ್ಥೆಗಳು, ಮ್ಯಾನೇಜ್ಮೆಂಟ್ ಪರೀಕ್ಷಾ ಅಕ್ರಮ ನಡೆಸದಂತೆ ಕಟ್ಟೆಚ್ಚರ ವಹಿಸಬೇಕು. ಯಾವುದೇ ಅಧಿಕಾರಿ, ಸಿಬ್ಬಂದಿ ಬಳಿ ಮೊಬೈಲ್ ಇರಬಾರದು.

You cannot copy content of this page

Exit mobile version