ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಸೋಮವಾರ ಆಲಿಕಲ್ಲು ಮಳೆಯಾಗಿದ್ದು, ಬೆಂಗಳೂರಿನಲ್ಲೂ ಹಲವು ಕಡೆ ಮಳೆ ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ 4 ಸೆಂ.ಮೀ., ಧರ್ಮಸ್ಥಳದಲ್ಲಿ 3 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಮೈಸೂರು ಜಿಲ್ಲೆಯ ಸರಗೂರು, ಹಾವೇರಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಇಂದು ಮಳೆ ಮುಂದುವರೆಯಲಿದ್ದು, ಇಂದು ತುಸು ಹೆಚ್ಚೇ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.