Home ಬೆಂಗಳೂರು 2027ರ ಅಂತ್ಯದೊಳಗೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸೂಚನೆ – ಸಚಿವ ಕೃಷ್ಣ ಬೈರೇಗೌಡ

2027ರ ಅಂತ್ಯದೊಳಗೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸೂಚನೆ – ಸಚಿವ ಕೃಷ್ಣ ಬೈರೇಗೌಡ

0

ಎತ್ತಿನಹೊಳೆ ಯೋಜನೆಯ ಮೂಲಕ 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ. ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಿದ್ದರು. 2027ರೊಳಗೆ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತಲುಪಿಸುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಯಿತು.

ಪ್ರಸ್ತುತ ತುಮಕೂರು ಜಿಲ್ಲೆಯ ಗಡಿಯವರೆಗೆ ನೀರು ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ಹಂತದಲ್ಲಿ ದೊಡ್ಡಬಳ್ಳಾಪುರ–ಕುಂದಾಣ ಮಾರ್ಗವಾಗಿ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ ಮತ್ತು ಚಿಂತಾಮಣಿ – ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಪೈಪ್‌ಲೈನ್ ಅಳವಡಿಸುವ ಕೆಲಸ ತಕ್ಷಣ ಆರಂಭಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಈ ಪೈಪ್‌ಲೈನ್‌ಗಳ ಒಟ್ಟು ಉದ್ದ 261.90 ಕಿ.ಮೀ. ಆಗಿದೆ.

ಪೈಪ್‌ಲೈನ್ ಅಳವಡಿಕೆಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಭೂಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಭೂಸ್ವಾಧೀನ ಆದೇಶ ಹೊರಡಿಸಿದ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಇದಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ನೀರು ಶುದ್ಧೀಕರಣ ಘಟಕಗಳು ಹಾಗೂ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್ ವ್ಯವಸ್ಥೆಗೆ ಸಂಬಂಧಿಸಿದ ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ತಕ್ಷಣ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಒಟ್ಟಾರೆ 2027ರ ಅಂತ್ಯದೊಳಗೆ ಮೂರು ಜಿಲ್ಲೆಗಳಿಗೆ ಶುದ್ಧ ಕುಡಿಯುವ ನೀರು ತಲುಪಿಸುವ ಗುರಿ ಸಾಧಿಸಲು ಎಲ್ಲಾ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಮತ್ತು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

You cannot copy content of this page

Exit mobile version