ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ: ಏಳು ಮಂದಿ ವಶಕ್ಕೆ; ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರದ ಘೋಷಣೆ

ಶಿವಮೊಗ್ಗ, ಫೆ. 25: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನನ್ನು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ತೀವ್ರ ಉದ್ವಿಗ್ನತೆ ಉಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಮೃತ ಬಾಲಕ ಸಂಕೇತ್ (16) ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಗೆ ಮುನ್ನ ನಡೆದ ವಿಶೇಷ ತರಗತಿಗೆ ಹಾಜರಾಗಿದ್ದ ನಂತರ ಈ ದುರ್ಘಟನೆ ಸಂಭವಿಸಿದೆ. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಸೇರಿಕೊಂಡು ಸಂಕೇತ್ ಮೇಲೆ ಹಲ್ಲೆ ನಡೆಸಿದರೆಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕರೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ.

ಕ್ರಿಕೆಟ್ ಪಂದ್ಯ ವಾಗ್ವಾದವೇ ಕಾರಣ?
ಶಿವಮೊಗ್ಗ ಎಸ್‌.ಪಿ. ನಿಖಿಲ್ ಪ್ರತಿಕ್ರಿಯಿಸಿ, ಎರಡು ದಿನಗಳ ಹಿಂದೆ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ವಾಗ್ವಾದವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು. “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಆರೋಪಿಗಳನ್ನು ಗಾಂಜಾ ಪರೀಕ್ಷೆಗೆ ಒಳಪಡಿಸಲಾಗುವುದು. ಗಾಂಜಾ ಹಾವಳಿ ಕುರಿತೂ ಸಮಗ್ರ ತನಿಖೆ ನಡೆಸುತ್ತೇವೆ,” ಎಂದು ತಿಳಿಸಿದ್ದಾರೆ.

ಸ್ಥಳೀಯರು ಮಾದಕ ವಸ್ತುಗಳ ಹಾವಳಿಯೇ ಈ ಘಟನೆಯ ಮೂಲ ಕಾರಣ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಊರುಗಡೂರಿನಲ್ಲಿ ಪೊಲೀಸ್ ಉಪ ಠಾಣೆ ತೆರೆಯಲು ಕ್ರಮ ಕೈಗೊಳ್ಳುವುದಾಗಿ ಎಸ್‌.ಪಿ. ತಿಳಿಸಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್
ಘಟನೆಯ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ಸೇರಿದಂತೆ ಊರುಗಡೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅನಾಹುತ ತಪ್ಪಿಸಲು ಕಟ್ಟೆಚ್ಚರ ವಹಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಕೇತ್ ಜೊತೆಗೆ ಗಾಯಗೊಂಡಿರುವ ಗಿರೀಶ್‌ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಸಹ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

15 ಲಕ್ಷ ಪರಿಹಾರ ಘೋಷಣೆ
ಮೃತ ಸಂಕೇತ್ ಕುಟುಂಬಕ್ಕೆ ರಾಜ್ಯ ಸರ್ಕಾರ ಒಟ್ಟಾರೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ ರೂ. ಮತ್ತು ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ. ನೀಡಲಾಗುತ್ತದೆ. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸರ್ಕಾರದ ಪರವಾಗಿ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಮತ್ತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಪರಿಹಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಜಿಲ್ಲಾಡಳಿತವು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸುವುದಾಗಿ ಭರವಸೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು