Monday, March 3, 2025

ಸತ್ಯ | ನ್ಯಾಯ |ಧರ್ಮ

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 3 : ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಅಪರಾಧ

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

ಹೈಕಮಾಂಡ್ ತೀರ್ಮಾನ ಅಂತಿಮ

ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page