ಬೆಂಗಳೂರು : ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneet Kerehalli) ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ (FIR) ದಾಖಲಿಸಿದ್ದಾರೆ. ಘಟನೆ ಸಂಬಂಧ ಒಟ್ಟು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿ ತನಿಖೆ ಮುಂದುವರಿಸಿರುವ ಪೊಲೀಸರು, ಈಗಾಗಲೇ ಆರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಅಪ್ರಾಪ್ತರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಘಟನೆಗೆ ಸಂಬಂಧಿಸಿದ ಮೊದಲ ಪ್ರಕರಣವನ್ನು ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪ ಹಾಗೂ ಎರಡು ಗುಂಪುಗಳ ನಡುವೆ ಶತ್ರುತ್ವಕ್ಕೆ ಕಾರಣವಾದ ಆರೋಪದಡಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ಪುನೀತ್ ಗೌಡ, ವಿನೋದ್ ನಾಯಕ್ ಸೇರಿದಂತೆ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಎರಡನೇ ಪ್ರಕರಣವನ್ನು ಕೊಲೆ ಯತ್ನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ. ಕಮಲ್ ಪಾಷಾ, ಅಬೂಬಕರ್ ಸಿದ್ದೀಕ್ ಹಾಗೂ ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನೂ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರನೇ ಪ್ರಕರಣವನ್ನು ಸಾರ್ವಜನಿಕ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ದಾಖಲಿಸಲಾಗಿದೆ. ಗಲಾಟೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ವ್ಯಕ್ತಿಗಳ ವಿರುದ್ಧ ಈ ಎಫ್‌ಐಆರ್ ದಾಖಲಾಗಿದ್ದು, ಅವರ ಪಾತ್ರದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ಮತ್ತಷ್ಟು ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಸ್ಥಳೀಯ ಪೊಲೀಸರು ನಿರಂತರ ಗಸ್ತು ನಡೆಸುತ್ತಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ ಘಟನೆಗೆ ಕಾರಣವಾದ ಸಂಪೂರ್ಣ ಬೆಳವಣಿಗೆಯ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
