ಉತ್ತರ ಪ್ರದೇಶದಲ್ಲಿ ಇಂದು ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿವೆ. ಈ ಎರಡು ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಡಬಲ್ ಡೆಕ್ಕರ್ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಯುಪಿಯ ಕನೌಜ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಮುಂಜಾನೆ ಯುಪಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಝಾನ್ಸಿ-ಮಿರ್ಜಾಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಈ ದುರ್ಘಟನೆಯಲ್ಲಿ ಕೂಡ ಆರು ಮಂದಿ ಸಾವನ್ನಪ್ಪಿದ್ದಾರೆ. ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯುಪಿಯಲ್ಲಿ ಒಂದೇ ದಿನ ಕೇವಲ ಐದು ಗಂಟೆಗಳ ಅವಧಿಯಲ್ಲಿ ಎರಡು ಮಾರಣಾಂತಿಕ ಅಪಘಾತಗಳು ನಡೆದಿರುವುದು ಗಮನಾರ್ಹ.