ವಿವಿ ಉಳಿಸಲು ಸಮಿತಿ ಅಸ್ಥಿತ್ವಕ್ಕೆ, ಮಾ 16 ರಂದು ದುಂಡು ಮೇಜಿನ ಸಭೆ,
ಮಾ 19 ರಂದು ಬೃಹತ್ ಪ್ರತಿಭಟನಾ ಸಭೆ: ವೈ.ಎಸ್. ವೀರಭದ್ರಪ್ಪ
ಹಾಸನ: ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಅಸ್ಥಿತ್ವಕ್ಕೆ, ಮಾರ್ಚ್ 16 ರಂದು ದುಂಡು ಮೇಜಿನ ಸಭೆ ಹಾಗೂ ಮಾರ್ಚ್ 19 ರಂದು ಬೃಹತ್ ಪ್ರತಿಭಟನಾ ಸಭೆ ಏರ್ಪಡಿಸಲಾಗಿದೆ ಎಂದು ನೂತನ ಸಮಿತಿ ಅಧ್ಯಕ್ಷ ಡಾ. ವೈ.ಎಸ್. ವೀರಭದ್ರಪ್ಪ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಮರು ವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸ್ಸನ್ನು ಹಾಸನ ಜಿಲ್ಲೆಯ ಜನರಾದ ನಾವು ತೀವ್ರವಾಗಿ ವಿರೋಧಿಸುತ್ತೇವೆ. ವಿಶ್ವವಿದ್ಯಾಲಯ ಉಳಿಸಿ ಹೋರಾಟವನ್ನು ತೀವ್ರಗೊಳಿಸಲು ಮಾರ್ಚ್ 16 ರಂದು ಹಾಸನದಲ್ಲಿ ‘ದುಂಡು ಮೇಜಿನ ಸಭೆ’ ಕರೆಯಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಶಿಕ್ಷಣ ತಜ್ಞರು, ಪ್ರಮುಖ ವ್ಯಕ್ತಿಗಳು, ಜನಪರ ಸಂಘಟನೆಗಳ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು, ವಿಶ್ವವಿದ್ಯಾಲಯ ಮತ್ತು ಅದರ ವ್ಯಾಪ್ತಿಯ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಪೋಷಕರನ್ನು ಈ ಸಭೆಗೆ ಆಹ್ವಾನಿಸಲಾಗುವುದು. ಹಾಗೂ ಮಾರ್ಚ್ 19 ರಂದು ಹಾಸನ ವಿಶ್ವವಿದ್ಯಾಲಯ ಉಳಿಸುವಂತೆ ಒತ್ತಾಯಿಸಿ ಹಾಸನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದರು. 2023 ಮಾರ್ಚ್ 21 ರಲ್ಲಿ ಕರ್ನಾಟಕ ಸರ್ಕಾರ ಹಾಸನದ ಹೇಮ ಗಂಗೊತ್ರಿಯನ್ನು ಸ್ವತಂತ್ರ ವಿಶ್ವವಿದ್ಯಾಲಯವಾಗಿ ಘೋಷಿಸಿದೆ.
ಹಾಸನ ವಿಶ್ವವಿದ್ಯಾಲಯದಲ್ಲಿ ಹೇಮಗಂಗೋತ್ರಿ ಕ್ಯಾಂಪಸ್‌ನಲ್ಲಿ 11 ಸ್ನಾತಕೋತ್ತರ ವಿಭಾಗಗಳಿದ್ದು, ಒಟ್ಟು 900 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದಲ್ಲದೇ ಹಾಸನ ವಿಶ್ವವಿದ್ಯಾಲಯದ ಸದಸ್ಯತ್ವ ಪಡೆದ ೫೬ ಪದವಿ ಕಾಲೇಜುಗಳಿವೆ. ಈ ಕಾಲೇಜುಗಳ ಪದವಿ ತರಗತಿಗಳಲ್ಲಿ 20000 ವಿದ್ಯಾರ್ಥಿಗಳು ಹಾಗೂ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿ 2000 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಈ ಒಟ್ಟು ವಿದ್ಯಾರ್ಥಿಗಳಲ್ಲಿ ಬಹುತೇಕ ಪ್ರಮಾಣದಲ್ಲಿ ವಿದ್ಯಾರ್ಥಿನಿಯರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮತ್ತು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಆದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿಗಳನ್ನು ಕುರಿತು ಅಧ್ಯಯನ ಮಾಡಲು ರಚಿಸಿದ್ದ ರಾಜ್ಯದ ಸಚಿವ ಸಂಪುಟದ ಉಪಸಮಿತಿಯು ಹಾಸನ ವಿಶ್ವವಿದ್ಯಾಲಯವೂ ಸೇರಿದಂತೆ 9ವಿಶ್ವವಿದ್ಯಾಲಯಗಳಿಗೆ ನೀಡಲಾಗಿದ್ದ ಸ್ವತಂತ್ರ ಸ್ಥಾನವನ್ನು ರದ್ದು ಮಾಡಿ. ಹಿಂದಿನ ವಿಶ್ವವಿದ್ಯಾಲಯಗಳಲ್ಲಿ ವಿಲೀನ ಮಾಡಲು ಶಿಫಾರಸ್ಸು ಮಾಡಿದೆ. ಇದರಿಂದಾಗಿ ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಮುಖ್ಯವಾಗಿ ಗ್ರಾಮೀಣ ಪ್ರದೇಶ ಮತ್ತು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳು ಅದರಲ್ಲಿಯೂ ಪ್ರಮುಖವಾಗಿ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯುವ ಅವಕಾಶಗಳಿಂದ ವಂಚಿತರಾಗಲಿದ್ದಾರೆ. ಹಾಗೂ ಹಾಲಿ ವ್ಯಾಸಂಗ ಮಾಡುತ್ತಿರುವ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಬಹಳ ತೊಂದರೆಯಾಗಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಹಿರಿಯ ದಲಿತ ಮುಂಖಂಡ ಹೆಚ್.ಕೆ. ಸಂದೇಶ್, ಹಾಸನ ವಿವಿ ಪ್ರಾಧ್ಯಾಪಕ ಡಾ. ಮಹೇಶ್, ಎಂ.ಜಿ. ಪೃಥ್ವಿ ಇತರರು ಉಪಸ್ಥಿತರಿದ್ರು.