ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಲಡಾಖ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಯುವಕರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮೇಲೆ ದಾಳಿ ಮಾಡಿದರು.
ಬಿಜೆಪಿ ಸರ್ಕಾರದ ಮಂತ್ರಿಗಳು ತಮ್ಮ ಸ್ವಂತ ಸಚಿವಾಲಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದಕ್ಕಾಗಿ ಆ ಸಚಿವಾಲಯಗಳಲ್ಲಿ ಆರ್‌ಎಸ್‌ಎಸ್‌ನವರನ್ನು ನಿಯೋಜಿಸಲಾಗಿದ್ದು ಅವರು ಸಚಿವಾಲಯಗಳ ಪ್ರತಿಯೊಂದು ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂದು ಅವರು ಆರೋಪಿಸಿದರು.
ದೇಶದ ಎಲ್ಲ ಪ್ರಮುಖ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ತನ್ನ ಜನರನ್ನು ಪ್ರಮುಖ ಹುದ್ದೆಗಳಲ್ಲಿ ನೇಮಿಸುತ್ತಿದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು. ಲಡಾಖ್‌ನಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತು ಮತ್ತು ಭಾರತದಲ್ಲಿ ಈ ಸ್ವಾತಂತ್ರ್ಯದ ಅಡಿಪಾಯ ಅದರ ಸಂವಿಧಾನವಾಗಿದೆ’ ಎಂದು ಹೇಳಿದರು.
ಲಡಾಖ್‌ನ ಯುವಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಚಿವಾಲಯಗಳಲ್ಲಿಯೂ ಆರ್‌ಎಸ್‌ಎಸ್ ನೇರ ಹಸ್ತಕ್ಷೇಪವನ್ನು ಹೊಂದಿದೆ ಎಂದು ವಿವರಿಸಿದರು. ‘ನೀವು ಭಾರತ ಸರ್ಕಾರದ ಮಂತ್ರಿಗಳ ಬಳಿಗೆ ಹೋಗಿ ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ತೆಗೆದುಕೊಳ್ಳುತ್ತೀರಾ ಎಂದು ಕೇಳಿದರೆ. ಇಲ್ಲಿ ಆರೆಸ್‌ಸ್‌ಗೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಇರುತ್ತಾರೆ ಅವರೊಡನೆ ಸೇರಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳುತ್ತಾರೆ” ಎಂದು ರಾಹುಲ್ ಗಾಂಧಿ ತಿಳಿಸಿದರು.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಸ್ತುತ ಎರಡು ದಿನಗಳ ಲಡಾಖ್ ಪ್ರವಾಸದಲ್ಲಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದರು. ಆದರೆ, ಈ ಅವಧಿಯಲ್ಲಿ ಲಡಾಖ್‌ಗೆ ಹೋಗಲು ಸಾಧ್ಯವಾಗಿರಲಿಲ್ಲ.