ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷದೊಳಗೆ ಟಿಕೆಟ್ ವಿಚಾರವಾಗಿ ಚರ್ಚೆಗಳು ಚುರುಕುಗೊಂಡಿವೆ. ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ.
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಹತ್ವ ಪಡೆದಿದೆ. ಈ ನಡುವೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವೂ ಕೆಲ ನಾಯಕರಿಂದ ವ್ಯಕ್ತವಾಗುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಚಿವ ಜಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವ ವಿಚಾರವನ್ನು ವರಿಷ್ಠರ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕೂಡ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತಮ್ಮ ಅಭಿಪ್ರಾಯವನ್ನು ಪಕ್ಷದೊಳಗೆ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಸಚಿವರು ಮತ್ತು ಶಾಸಕರು ಭಾಗವಹಿಸಿದರು.
ಸಭೆಯಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್, ಕೃಷ್ಣ ಭೈರೇಗೌಡ, ಶಾಸಕ ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್ ಆಂಜನೇಯ ಸೇರಿದಂತೆ ಹಲವು ನಾಯಕರು ಹಾಗೂ ದಾವಣಗೆರೆ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.
ಸಭೆಯ ಬಳಿಕ ಮಾತನಾಡಿದ ಮಂಜುನಾಥ್ ಭಂಡಾರಿ, “ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದೇ ಮುಖ್ಯ ಉದ್ದೇಶ. ಚುನಾವಣೆಗೆ ಸಂಬಂಧಿಸಿದ ತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮಾರ್ಚ್ 24ರಂದು ಮತ್ತೊಮ್ಮೆ ಸಭೆ ನಡೆಯಲಿದ್ದು, ಜಿಲ್ಲೆಯ ಇನ್ನಷ್ಟು ನಾಯಕರು ಅದರಲ್ಲಿ ಭಾಗಿಯಾಗಲಿದ್ದಾರೆ” ಎಂದು ಹೇಳಿದರು.
ಇದೇ ವೇಳೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಅವನ್ನು ಪಕ್ಷದ ರಾಜ್ಯ ನಾಯಕತ್ವಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
