ದಾವಣಗೆರೆ ಉಪಚುನಾವಣೆ: ‘ಬಿ ಫಾರಂ’ ಇಲ್ಲದೇ ಸಮರ್ಥ್ ನಾಮಪತ್ರ, ನನಗೆ ಗೊತ್ತೇ ಇಲ್ಲ ಎಂದ ಡಿಕೆಶಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಸುತ್ತ ರಾಜಕೀಯ ಚರ್ಚೆಗೆ ಕಾರಣವಾಗುವ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಪಕ್ಷದ ಅಧಿಕೃತ ‘ಬಿ ಫಾರಂ’ ಇಲ್ಲದೇ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿರುವುದು ಗಮನ ಸೆಳೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, “ಈ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಬಂದ ನಂತರ ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಘೋಷಣೆಗೂ ಮುನ್ನ ಈ ರೀತಿಯ ಕ್ರಮ ಕೈಗೊಂಡಿರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದರು.

ಇನ್ನೊಂದೆಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಯದೇ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ನಡೆದಿರುವುದು ಪಕ್ಷದೊಳಗಿನ ಸಂಯೋಜನೆ ಕೊರತೆಯನ್ನು ತೋರಿಸುತ್ತದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ನಡೆಯುತ್ತಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಮರ್ಥ್ ಶಾಮನೂರು, “ಇಂದು ಯುಗಾದಿ ಮತ್ತು ರಂಜಾನ್ ಒಂದೇ ದಿನ ಬಂದಿರುವ ವಿಶೇಷ ದಿನ. ದಿನ ಶುಭವಾಗಿರುವುದರಿಂದ ನಾಮಪತ್ರ ಸಲ್ಲಿಸಿದ್ದೇನೆ. ಟಿಕೆಟ್ ಇಂದು ಸಿಗದಿದ್ದರೂ ನಾಳೆ ಸಿಗುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಕಾಂಗ್ರೆಸ್‌ನಿಂದಲೇ ಸ್ಪರ್ಧಿಸುತ್ತಿದ್ದೇನೆ. ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನಿಮಗೆ ಗೊತ್ತೇ ಇದೆ. ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಕಟ್ಟಿದವರು ಅವರು. ಟಿಕೆಟ್ ಖಚಿತವಾಗಿ ಸಿಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ನಡುವೆ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಟ್ವೀಟ್ ಮೂಲಕ ತಮ್ಮ ಪುತ್ರನ ನಾಮಪತ್ರ ಸಲ್ಲಿಕೆಯನ್ನು ದೃಢಪಡಿಸಿದ್ದಾರೆ. “ಶಾಮನೂರು ಶಿವಶಂಕರಪ್ಪ ಅವರ ಆಶೀರ್ವಾದ ಮತ್ತು ಜನರ ಬೆಂಬಲದಿಂದ ಸಮರ್ಥ್ ಶಾಮನೂರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಕಾಂಗ್ರೆಸ್ ಟಿಕೆಟ್ ಇನ್ನೂ ಅಂತಿಮವಾಗಿಲ್ಲ. ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಭೆ ನಡೆದರೂ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಸ್ಥಳೀಯ ಗುಂಪುಗಳ ನಡುವಿನ ಭಿನ್ನಾಭಿಪ್ರಾಯ ಮತ್ತು ಸಮುದಾಯ ಸಮೀಕರಣದ ಪ್ರಶ್ನೆಗಳು ಟಿಕೆಟ್ ಘೋಷಣೆಯನ್ನು ವಿಳಂಬಗೊಳಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು