ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಾಲ್ತುಳಿತ ಪ್ರಕರಣ ಸಂಬಂಧ ಅಮಾನತಾದ ಕಮೀಷನರ್ ಬಿ.ದಯಾನಂದ್ ಅವರ ಜಾಗಕ್ಕೆ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಬಿ.ದಯಾನಂದ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಲಾಗಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ. 1996 ಬ್ಯಾಚ್ ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದವರಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ನೇಮಕ ಮಾಡಿ ರಾಜ್ಯ ಆದೇಶ ಹೊರಡಿಸಿದೆ.
2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿಯೂ ಸೀಮಂತ ಕುಮಾರ್ ಸಿಂಗ್ ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್‌ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಬೆಂಗಳೂರಿನ 39 ನೇ ನೂತನ ಕಮೀಷನರ್ ಆಗಿ ನೇಮಕಗೊಂಡಿದ್ದಾರೆ.