ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ರಮೇಶ್ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿಯಾಗಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಬುಧವಾರ ರಾತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದ ಬಿಜೆಪಿ ಶಾಸಕ ಸಿ.ಟಿ.ರವಿ, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಬಳಿಕ ಈ ಭೇಟಿಯನ್ನು ಸೌಹಾರ್ದಯುತ ಭೇಟಿಯೆಂದು ಬಣ್ಣಿಸಿದ್ದ ಸಿದ್ದರಾಮಯ್ಯ, ಸಾಮಾಜಿಕ ಜಾಲತಾಣದಲ್ಲಿ ಸಿ.ಟಿ.ರವಿ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದರು.
ಇದರ ಬೆನ್ನಲ್ಲೇ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ ಕೆಲವೇ ಹೊತ್ತಿನಲ್ಲಿ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಆದರೆ, ಬಿಜೆಪಿ ಮೂಲಗಳ ಪ್ರಕಾರ ಈ ಭೇಟಿಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ವಿದೇಶ ಪ್ರವಾಸದಲ್ಲಿದ್ದ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
