ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ವಧು-ವರರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಿಜ್ನೋರ್ ಜಿಲ್ಲೆಯ ಧಾಂಪುರ್ ಪೊಲೀಸ್ ಠಾಣೆಯ ರಾಷ್ಟ್ರೀಯ ಹೆದ್ದಾರಿ 74 ರಲ್ಲಿರುವ ಅಗ್ನಿಶಾಮಕ ಠಾಣೆಯ ಬಳಿ ಶುಕ್ರವಾರ ರಾತ್ರಿ 2:00 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ದಟ್ಟವಾದ ಮಂಜಿನಿಂದಾಗಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ವಧು-ವರರು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ಧಂಪುರದ ತಿವಾರಿ ಗ್ರಾಮದ ನಿವಾಸಿಗಳು.
ಅಪಘಾತದಲ್ಲಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ವಧು-ವರರು, ವರನ ಚಿಕ್ಕಮ್ಮ ಮತ್ತು ವರನ ಸಹೋದರ ಸೇರಿದಂತೆ ಏಳು ಮಂದಿ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತಕ್ಕೀಡಾದ ಕುಟುಂಬದವರು ವಿವಾಹವಾದ ನಂತರ ಬಿಹಾರದಿಂದ ಮೊರಾದಾಬಾದ್‌ಗೆ ಬಂದಿದ್ದರು. ಅಲ್ಲಿಂದ ಮನೆಗೆ ಬರಲು ಆಟೋ ಬುಕ್ ಮಾಡಿದ್ದರು.
ರಾಷ್ಟ್ರೀಯ ಹೆದ್ದಾರಿ 74ರಲ್ಲಿರುವ ಅಗ್ನಿಶಾಮಕ ಠಾಣೆ ಬಳಿ ಆಟೋ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಬಿಜ್ನೋರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಸಾವುಗಳಿಗೆ ಸಿಎಂ ಯೋಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.