ಕೊಣನೂರು : ಹಾಸನ ಜಿಲ್ಲೆಯ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಣ್ಣಸ್ವಾಮಿ (48) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೊಡ್ಡಮಗ್ಗೆ ಹೋಬಳಿಯ ಕಣಿಯಾರು ಗ್ರಾಮದ ಬಾಲಕಿ ಮನೆಯ ಸಮೀಪದ ಸಂಬಂಧಿಕರ ಮನೆಗೆ ಆಟವಾಡಲು ಹೋಗಿದ್ದಳು. ಬಳಿಕ ಮನೆಗೆ ಮರಳಿದಾಗ ಆಕೆಯ ಬಟ್ಟೆಯಲ್ಲಿ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು ವಿಚಾರಣೆ ನಡೆಸಿದ್ದಾರೆ. ಮಗುವಿನ ವರ್ತನೆ ಮತ್ತು ಸನ್ನೆಗಳ ಆಧಾರದ ಮೇಲೆ ಅನುಮಾನ ವ್ಯಕ್ತವಾದ ಬಳಿಕ ತಕ್ಷಣ ಕೊಣನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವೈದ್ಯರ ಪ್ರಾಥಮಿಕ ಪರೀಕ್ಷೆಯ ನಂತರ ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಾಲಕಿಯ ಪೋಷಕರು ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ಸಣ್ಣಸ್ವಾಮಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಕೈಗೊಂಡಿದ್ದಾರೆ.
