ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ- ಸಿಎಲ್‌ಪಿ ಸಭೆಯಲ್ಲಿ ಅಧಿಕೃತ ಘೋಷಣೆ; ಜೂನ್ 3ರಂದು ಪ್ರಮಾಣ ವಚನ

ರಾಜ್ಯ ರಾಜಕಾರಣದಲ್ಲಿ ದಿನಗಳಿಂದ ಮನೆ ಮಾಡಿದ್ದ ತೀವ್ರ ಕುತೂಹಲಕ್ಕೆ ಶನಿವಾರ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಸ್ಥಾನಕ್ಕೆ ಏರಲಿದ್ದಾರೆ ಎಂಬುದು ಬಹುತೇಕ ನಿಶ್ಚಿತವಾಗಿತ್ತು. ಕಳೆದ ಮೂರು ವರ್ಷಗಳ ಕಾಲ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ ಡಿಕೆಶಿ, ಇದೀಗ ರಾಜ್ಯದ ಅತ್ಯುನ್ನತ ಗದ್ದುಗೆಯನ್ನು ಅಲಂಕರಿಸಲಿದ್ದಾರೆ.

ಪ್ರತಿ ಶಾಸಕರಿಗೂ ಹಸ್ತಲಾಘವ
ಸಿಎಲ್‌ಪಿ ಸಭೆಗೆ ಆಗಮಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಕೊಠಡಿಯಲ್ಲಿ ತಮ್ಮ ಆರಾಧ್ಯ ದೈವ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಭೆಯ ಆರಂಭದಲ್ಲಿ ಅವರು ಸಭಾಂಗಣದಲ್ಲಿದ್ದ ಪ್ರತಿಯೊಬ್ಬ ಶಾಸಕರ ಬಳಿ ಖುದ್ದಾಗಿ ತೆರಳಿ ಹಸ್ತಲಾಘವ ಮಾಡಿ ಎಲ್ಲರ ಗಮನ ಸೆಳೆದರು. ಎಐಸಿಸಿ ವೀಕ್ಷಕರಾಗಿ ಹಿರಿಯ ನಾಯಕರಾದ ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆಯಲ್ಲಿ ಭಾಗವಹಿಸಿದ್ದರು.

ಜೂನ್ 3ರಂದು ಸರಳ ಪ್ರಮಾಣ ವಚನ ಸ್ವೀಕಾರ
ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿಗಳ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಪ್ರಕಾರ, ಜೂನ್ 3ರ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಈ ಕಾರ್ಯಕ್ರಮ ಜರುಗಲಿದ್ದು, ಇಂಧನ ಬಿಕ್ಕಟ್ಟು ಮತ್ತು ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಯಾವುದೇ ಆಡಂಬರವಿಲ್ಲದೆ ಅತ್ಯಂತ ಸರಳವಾಗಿ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು