ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ಈದ್-ಇ-ಮಿಲಾದ್ ಮೆರವಣಿಗೆ ವೇಳೆ ನಡೆದ ಕೋಮು ಘರ್ಷಣೆ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು 24 ಎಫ್‌ಐಆರ್‌ಗಳನ್ನು ದಾಖಲಿಸಿ 60 ಜನರನ್ನು ಬಂಧಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಶಿವಮೊಗ್ಗ ಸಹಜ ಸ್ಥಿತಿಗೆ ಬಂದಿದ್ದು, ಸದ್ಯ ಶಾಂತಿಯುತವಾಗಿದೆ ಎಂದು ಹೇಳಿದ್ದಾರೆ.
”ನಗರದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಯಾರೂ ವದಂತಿಗಳನ್ನು ನಂಬಬಾರದು ಮತ್ತು ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಅವರು ಹೇಳಿದರು.
ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.
“ನಾವು ಹೊರಗಿನವರ ಪಾತ್ರವನ್ನು ಸಹ ತನಿಖೆ ಮಾಡುತ್ತಿದ್ದೇವೆ. ಪೊಲೀಸರಿಗೆ ಎಲ್ಲ ಆಯಾಮಗಳಲ್ಲೂ ಸಾಕ್ಷ್ಯ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಗಳು ಸೆರೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೆರವಣಿಗೆ ವೇಳೆ ಮಚ್ಚು ಮತ್ತು ಕತ್ತಿಗಳನ್ನು ಝಳಪಿಸುತ್ತಿರುವವರ ಕುರಿತ ವರದಿಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಅವರು ವಿವರಿಸಿದರು.
ಘಟನೆಯ ಸಂದರ್ಭದಲ್ಲಿ ಪೊಲೀಸರು ಯುವಕನನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹರಡಿದ ಆರೋಪದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂದೇಶವನ್ನು ಫಾರ್ವರ್ಡ್ ಮಾಡಿದವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಕಳೆದ ಭಾನುವಾರ ಶಿವಮೊಗ್ಗ ನಗರದಲ್ಲಿ ಈದ್-ಎ-ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಘಟನೆಯ ನಂತರ, ಅಧಿಕಾರಿಗಳು ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು.