Home ರಾಜ್ಯ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

0

ದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ತನಿಖೆ ನಡೆಸಬೇಕೆಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ರವಿವಾರ ಆಗ್ರಹಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದಿರುವ ಪತ್ರದಲ್ಲಿ, ಸಂವಿಧಾನದ ವಿಧಿ 14 ಮತ್ತು 16ರ ಅಡಿಯಲ್ಲಿ ಸಾರ್ವಜನಿಕ ಉದ್ಯೋಗದಲ್ಲಿ ಸಮಾನತೆಯ ಹಕ್ಕನ್ನು ಕಾಯ್ದುಕೊಳ್ಳಲು ಕೆಪಿಎಸ್‌ಸಿಯ ಪಾರದರ್ಶಕತೆ ಅತ್ಯಂತ ಅಗತ್ಯ ಎಂದು ಕರಂದ್ಲಾಜೆ ಒತ್ತಿಹೇಳಿದ್ದಾರೆ.

ಈ ಸಂಸ್ಥೆಯ ಕಾರ್ಯವೈಖರಿಯಲ್ಲಿ ಯಾವುದೇ ರೀತಿಯ ಲೋಪವಾದರೂ ಅದು ಅರ್ಹ ಅಭ್ಯರ್ಥಿಗಳಿಗೆ ಹಾನಿ ಉಂಟುಮಾಡುವುದು ಮಾತ್ರವಲ್ಲದೆ, ಸಂವಿಧಾನಾತ್ಮಕ ಸಂಸ್ಥೆಗಳು ಹಾಗೂ ಕಾನೂನಿನ ಆಡಳಿತದ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಸಿಯುವಂತೆ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಆರೋಪಗಳ ತೀವ್ರತೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ ತನಿಖೆಯ ಅಗತ್ಯವಿದೆ ಎಂದು ಸಚಿವರು ಪ್ರತಿಪಾದಿಸಿದ್ದಾರೆ.

ಈ ಅಕ್ರಮದ ಹಿಂದಿರುವ ಗೂಢಾಲೋಚನೆಯನ್ನು ಪೂರ್ಣವಾಗಿ ಬಯಲಿಗೆಳೆಯಲು, ಭಾಗಿಯಾದ ಎಲ್ಲ ವ್ಯಕ್ತಿಗಳನ್ನು ಗುರುತಿಸಲು, ಲಂಚದ ಹಣದ ವಹಿವಾಟನ್ನು ಪತ್ತೆಹಚ್ಚಲು ಹಾಗೂ ಸರ್ಕಾರಿ ನೌಕರರು ಮತ್ತು ಮಧ್ಯವರ್ತಿಗಳ ಪಾತ್ರವನ್ನು ಪರಿಶೀಲಿಸಿ ಯಾವುದೇ ಮುಲಾಜಿಲ್ಲದೆ ಹೊಣೆಗಾರಿಕೆಯನ್ನು ನಿಗದಿಪಡಿಸಲು ಸಿಬಿಐ ತನಿಖೆ ಅತ್ಯಗತ್ಯ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

You cannot copy content of this page

Exit mobile version