ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಾದವ್‌ಗೆ ಬೆಂಗಳೂರಿನಲ್ಲಿ ಹಿಂದುತ್ವ ಶಕ್ತಿಗಳು ಸನ್ಮಾನ ಮಾಡಿವೆ.
ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ನಂತರ ಶುಕ್ರವಾರ ಇಬ್ಬರನ್ನೂ ಸನ್ಮಾನಿಸಲಾಯಿತು. ವಿಶೇಷ ನ್ಯಾಯಾಲಯ ಆರೋಪಿಗಳಿಗೆ ಇದೇ ತಿಂಗಳ 9ರಂದು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಬ್ಬರು ವಿಜಯಪುರದ ಸ್ವಗ್ರಾಮ ತಲುಪಿದ ಬಳಿಕ ಸಂಘ ಪರಿವಾರ ಹಾಗೂ ಶ್ರೀರಾಮ ಸೇನೆ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಭಾನುವಾರ ವೈರಲ್ ಆಗಿವೆ.
ವಿಜಯಪುರ ತಲುಪಿದ ಆರೋಪಿಗಳು ಕಾಳಿಮಾತಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಸಂಫು ಪರಿವಾರ ಹಾಗೂ ಶ್ರೀರಾಮ ಸೇನೆಯ ಸದಸ್ಯರು ಹೂಮಾಲೆ ಹಾಕಿ ಸನ್ಮಾನಿಸಿದರು. ನಗರದ ಶಿವಾಜಿ ವೃತ್ತದಲ್ಲಿರುವ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಅವರ ನಿವಾಸದ ಮುಂದೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ 18 ಮಂದಿಗೆ ಜಾಮೀನು ಸಿಕ್ಕಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹಿಂದುತ್ವವಾದಿ ಸಂಘಟನೆಗಳು ಹಾಗೂ ಬಿಜೆಪಿ ಬೆಂಬಲಿಗರು ಸನ್ಮಾನ ಮಾಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಆಗಸ್ಟ್‌ನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿ ನವೀನ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು. ಲಂಕೇಶ್ ಹಂತಕರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಂಭ್ರಮದಿಂದ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ.