Home ಬ್ರೇಕಿಂಗ್ ಸುದ್ದಿ ಸಿದ್ದರಾಮಯ್ಯ ರಾಜೀನಾಮೆ, ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಎಂದು ಸಿದ್ದರಾಮಯ್ಯರಿಂದಲೇ ಘೋಷಣೆ

ಸಿದ್ದರಾಮಯ್ಯ ರಾಜೀನಾಮೆ, ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಎಂದು ಸಿದ್ದರಾಮಯ್ಯರಿಂದಲೇ ಘೋಷಣೆ

0

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಘೋಷಿಸಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಈ ಮಹತ್ವದ ಘೋಷಣೆ ನಡೆದಿರುವುದಾಗಿ ತಿಳಿದುಬಂದಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಾನು ಯಾವುದೇ ಒತ್ತಡಕ್ಕೆ ಒಳಗಾಗಿ ಅಲ್ಲ, ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ” ಎಂದು ಸಚಿವರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಸ್ತಾವನೆಗೆ ಸಭೆಯಲ್ಲಿದ್ದ ಎಲ್ಲಾ ಸಚಿವರು ಒಮ್ಮತದಿಂದ ಬೆಂಬಲ ಸೂಚಿಸಿರುವ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ. ಕಳೆದ ಕೆಲವು ವಾರಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದವು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿದ್ದರೂ, ಇದೀಗ ಹೈಕಮಾಂಡ್ ಮಧ್ಯಸ್ಥಿಕೆಯಿಂದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ರಾಜಕೀಯ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರೊಂದಿಗೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅವರ ರಾಜೀನಾಮೆ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕೃತ ಕ್ರಮಗಳು ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಭೆಯ ಬಳಿಕ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡಿರುವ ಭಾವನಾತ್ಮಕ ಕ್ಷಣಗಳು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಪ್ರಮುಖ ಚರ್ಚೆಯ ವಿಚಾರವಾಗಿದೆ.

ಶುಕ್ರವಾರ (ಮೇ 29) ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಲಿದ್ದಾರೆ.

ಈ ಬೆಳವಣಿಗೆಯೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್‌ರಚನೆ, ಅಧಿಕಾರ ಹಂಚಿಕೆ ಹಾಗೂ ಪ್ರಾದೇಶಿಕ ಸಮತೋಲನದ ಪ್ರಶ್ನೆಗಳು ಪ್ರಮುಖ ಚರ್ಚೆಯಾಗುವ ಸಾಧ್ಯತೆ ಇದೆ.

You cannot copy content of this page

Exit mobile version