Home ಬೆಂಗಳೂರು ಬಿಜೆಪಿ, ಆರ್‌ಎಸ್‌ಎಸ್‌ಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿ, ಆರ್‌ಎಸ್‌ಎಸ್‌ಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: “ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ (RSS) ನಮ್ಮ ದೇಶದ ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲ. ಈ ದೇಶದಲ್ಲಿ ಸಂವಿಧಾನದ ವಿರೋಧಿಗಳು ಯಾರಾದರೂ ಇದ್ದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಮಾತ್ರ,” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದೇ ವೇಳೆ, ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ ಮಾಜಿ ಮುಖ್ಯಮಂತ್ರಿಗಳು, ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ ಸಲ್ಲಿಸಿದರು. ತಳಮಟ್ಟದಿಂದ, ಸಾಮಾನ್ಯ ಕಾರ್ಯಕರ್ತರಾಗಿ ಬಂದು ಐದು ದಶಕಗಳ ಕಾಲ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಹರಿಪ್ರಸಾದ್ ಅವರ ಸಿದ್ಧಾಂತ ಬದ್ಧತೆಯು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, “ಕಳೆದ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಬಹುತ್ವವನ್ನು ಹಾಳುಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಧರ್ಮ, ಜಾತಿ ಹಾಗೂ ಸಂಸ್ಕೃತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸವಾಗುತ್ತಿದೆ. ಆರ್‌ಎಸ್‌ಎಸ್‌ನ ಸಂಸ್ಥಾಪಕ ಹೆಗ್ಡೆವಾರ್ ಅವರು ಇಟಲಿಯ ಮುಸಲೋನಿ ಮತ್ತು ಜರ್ಮನಿಯ ಹಿಟ್ಲರ್ ಅವರ ಸರ್ವಾಧಿಕಾರಿ ಆಡಳಿತವನ್ನು ಭಾರತದಲ್ಲಿ ಹುಟ್ಟುಹಾಕಲು ಪ್ರಯತ್ನಿಸಿದ್ದರು. ಇವರ ಸಂವಿಧಾನ ವಿರೋಧಿ ಧೋರಣೆಯನ್ನು ಅರಿತು, ದೇಶದ ಬಹುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ನಮ್ಮ ಕಾರ್ಯಕರ್ತರು ಸನ್ನದ್ಧರಾಗಬೇಕು. ಬಿಜೆಪಿಯವರು ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ಸುಳ್ಳುಗಳನ್ನು ತಡೆದು ಜನರನ್ನು ಜಾಗೃತಗೊಳಿಸಬೇಕಿದೆ,” ಎಂದರು.

ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಐದು ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ , “ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 40 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೇವೆ. ಖಜಾನೆ ಖಾಲಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿರೋಧ ಪಕ್ಷದವರು ನುಡಿದಿದ್ದ ಭವಿಷ್ಯವನ್ನು ಸುಳ್ಳು ಮಾಡಿ, ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ 5 ವಿಧಾನಸಭಾ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವುದು ನಮ್ಮ ಗ್ಯಾರಂಟಿ ಯೋಜನೆಗಳ ಮೇಲಿನ ಜನರ ಪ್ರೀತಿ ಮತ್ತು ವಿಶ್ವಾಸಕ್ಕೆ ಸಾಕ್ಷಿಯಾಗಿದೆ,” ಎಂದು ಹೆಮ್ಮೆಯಿಂದ ನುಡಿದರು.

ಮುಂಬರುವ 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವಂತೆ ಕರೆ ನೀಡಿದ ಸಿದ್ದರಾಮಯ್ಯ, “ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಜಿಲ್ಲಾ, ತಾಲ್ಲೂಕು ಮತ್ತು ಬೂತ್ ಮಟ್ಟದಲ್ಲಿ ಶಿಬಿರಗಳನ್ನು ನಡೆಸಿ ಪಕ್ಷದ ಸಿದ್ಧಾಂತವನ್ನು ಗಟ್ಟಿಗೊಳಿಸಬೇಕು. 2028ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಮತ್ತು 2029ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದು ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನ ಮಂತ್ರಿಯನ್ನಾಗಿ ಮಾಡುವ ದೃಢ ಸಂಕಲ್ಪವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕು,” ಎಂದು ಕರೆ ನೀಡಿದರು.

You cannot copy content of this page

Exit mobile version