ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬದಲಾವಣೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಕ್ತಿ ಪ್ರದರ್ಶಿಸಲು ಯಾವುದೇ ರ‍್ಯಾಲಿ ಅಥವಾ ರೋಡ್ ಶೋಗಳ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಪ್ರತಿಪಾದಿಸಿದ್ದಾರೆ. ಸಿದ್ದರಾಮಯ್ಯ ಅವರೇ ಪಕ್ಷಕ್ಕೆ ಒಂದು ಶಕ್ತಿಯ ಮೂಲವಾಗಿದ್ದು, ಈ ವಿಷಯ ಎಲ್ಲರಿಗೂ ತಿಳಿದಿದೆ ಎಂದು ಅವರು ದೆಹಲಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡುವಾಗ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಆಪ್ತ ವಲಯದವರಾದ ಮಹದೇವಪ್ಪ ಅವರು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಮಹದೇವಪ್ಪ ಅವರ ಈ ಭೇಟಿ ಸಾಕಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ತಾವು ಹೈಕಮಾಂಡ್ ಜೊತೆ ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವರು, ರಾಜ್ಯದ ಬೆಳವಣಿಗೆಗಳ ಬಗ್ಗೆ ನಾಯಕರಿಗೆ ಈಗಾಗಲೇ ಅರಿವಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕಾಗಿ ‘ಅಹಿಂದ’ ರ‍್ಯಾಲಿ ನಡೆಸಲು ಹೈಕಮಾಂಡ್ ಅನುಮತಿ ಕೋರಲಾಗಿದೆ ಎಂಬ ವರದಿಗಳನ್ನು ಮಹದೇವಪ್ಪ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ರ‍್ಯಾಲಿಯನ್ನು ಯೋಜಿಸಿಲ್ಲ ಮತ್ತು ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕೇವಲ ಊಹಾಪೋಹಗಳಷ್ಟೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಅಂತಹ ರ‍್ಯಾಲಿ ಹಮ್ಮಿಕೊಳ್ಳಲು ಬಯಸಿದರೂ ಹೈಕಮಾಂಡ್ ಅದಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಇನ್ನು ರಾಜ್ಯದ ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸಂಪೂರ್ಣವಾಗಿ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
