Home ಬ್ರೇಕಿಂಗ್ ಸುದ್ದಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾರಿ ವಿಳಂಬ ಸರ್ಕಾರಕ್ಕೆ ಕೋಟಿ – ಕೋಟಿ ನಷ್ಟ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾರಿ ವಿಳಂಬ ಸರ್ಕಾರಕ್ಕೆ ಕೋಟಿ – ಕೋಟಿ ನಷ್ಟ

0

ಹಾಸನ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದಿರುವುದರಿಂದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಬೇಕಿದ್ದ ಸಾವಿರಾರು ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ. ಮಂಜುನಾಥ್ ಆರೋಪಿಸಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯ ಮೂಲ ಉದ್ದೇಶವೇ ಅಧಿಕಾರ ಮತ್ತು ಅನುದಾನವನ್ನು ವಿಕೇಂದ್ರೀಕರಣಗೊಳಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವುದಾಗಿದೆ. ಆದರೆ ಚುನಾಯಿತ ಪ್ರತಿನಿಧಿಗಳಿಲ್ಲದೆ ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಒಳಗೊಂಡ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಲ್ಲಿದೆ. ಈ ವ್ಯವಸ್ಥೆಯ ಮೂಲಕ ಗ್ರಾಮೀಣ ಭಾಗದಲ್ಲಿ ಹೊಸ ನಾಯಕತ್ವ ಬೆಳೆಸುವುದು, ಜನರ ಭಾಗವಹಿಸುವಿಕೆಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ಸರ್ಕಾರದ ಅನುದಾನವನ್ನು ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಬಳಸುವುದು ಉದ್ದೇಶವಾಗಿದೆ. ಆದರೆ ಚುನಾವಣೆಗಳು ವಿಳಂಬವಾಗಿರುವುದರಿಂದ ಈ ಉದ್ದೇಶಗಳಿಗೆ ಧಕ್ಕೆಯಾಗಿದೆ ಎಂದು ಅವರು ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಹಣಕಾಸು ಆಯೋಗದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸುಮಾರು ₹38,400 ಕೋಟಿಗೂ ಅಧಿಕ ಅನುದಾನ ರಾಜ್ಯಕ್ಕೆ ಸಂಬಂಧಿಸಿದ್ದು, ಚುನಾವಣೆ ವಿಳಂಬದಿಂದ ಈ ಅನುದಾನದ ಬಳಕೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ಮಂಜುನಾಥ್ ಹೇಳಿದರು.

You cannot copy content of this page

Exit mobile version