Home ರಾಜ್ಯ ಉತ್ತರ ಕನ್ನಡ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಡಾ.ಶರಣ ಪ್ರಕಾಶ ಪಾಟೀಲ

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಡಾ.ಶರಣ ಪ್ರಕಾಶ ಪಾಟೀಲ

0

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿಮಾರ್ಣ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಆಸ್ಪತ್ರೆ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.

ಅವರು ಶುಕ್ರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತ ಬಹುದಿನದ ಬೇಡಿಕೆ ಇದ್ದು, ಇದನ್ನು ನಿರ್ಮಾಣ ಮಾಡಲು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರ ಒತ್ತಾಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇನ್ನೂ ಕೆಲವೇ ದಿನಗಳಲ್ಲಿ ಕ್ರಿಮ್ಸ್ನಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಅದಕ್ಕೆ ಬೇಕಾದ ಉಪಕರಣ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದರು.

ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೂ 3.75 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸಲಿದ್ದು, ಮುಂದಿನ ಎರಡು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಸ್ಥಳೀಯ ಜನರ ಚಿಕಿತ್ಸೆಗೆ ಅನುಕೂಲವಾಗಲಿದ್ದು, ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಚಿಕಿತ್ಸೆ ತೆರಳುವುದು ತಪ್ಪಲಿದೆ ಎಂದರು.

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಶೀಘ್ರದಲ್ಲಿ ಎಂಆರ್ಐ ಯಂತ್ರವನ್ನು ಒದಗಿಸಲಾಗುವುದು. ಈ ಮೂಲಕ ಜಿಲ್ಲಾ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ರಾಜ್ಯದಲ್ಲಿ ಈಗಾಗಲೇ 71 ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ 24 ಸರ್ಕಾರಿ ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.

ಸರ್ಕಾರದ ವತಿಯಿಂದ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಮೂಲಕ ಸ್ಥಳೀಯರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ ಎಂದರು.

ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ – ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಕೆ. ಸೈಲ್ ಮಾತನಾಡಿ ಜಿಲ್ಲೆಯ ಜನರ ಬೇಡಿಕೆಗೆ ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸ್ಪಂದಿಸುವ ಮೂಲಕ ಮೆಡಿಕಲ್ ಕಾಲೇಜಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಗೆ ಶಿಲಾನ್ಯಾಸ ಮಾಡಿರುವುದು ಸಂತೋಷವಾಗಿದೆ. ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ 450 ಹಾಸಿಗೆಯ ಆಸ್ಪತ್ರೆ ಜತೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪನೆಯಿಂದ ಸ್ಥಳಿಯ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಗೆ ಸಚಿವರು ಸ್ಪಂದಿಸಲಿದ್ದಾರೆ ಎಂಬ ನಿರೀಕ್ಷೆಯಿದೆ. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೈ ಜೋಡಿಸುವ ಮೂಲಕ ಮುಖ್ಯಂತ್ರಿಗಳಿಗೆ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಮನವರಿಕೆ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉಪಾಧ್ಯಕ್ಷೆ ಪ್ರೀತಿ, ಸದಸ್ಯೆ ರೋಶನಿ ಮಾಳಸೇಕರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಾರವಾರ ತಾಲೂಕು ಅಧ್ಯಕ್ಷ ರಾಜೇಂದ್ರ ರಾಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಘಟಕದ ಮುಖ್ಯ ಅಭಿಯಂತರ ಜೆ.ಆರ್. ಮುಕ್ಕಣ್ಣ ನಾಯ್ಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ., ವೈದ್ಯಕೀಯ ಅಧೀಕ್ಷಕ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಕುಡ್ತಳಕರ್, ಆರ್ಥಿಕ ಸಲಹೆಗಾರ ಆನಂದಸಾ ಹಬೀಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮತ್ತಿತ್ತರರು ಉಪಸ್ಥಿತರಿದ್ದರು.

You cannot copy content of this page

Exit mobile version