Home ಬ್ರೇಕಿಂಗ್ ಸುದ್ದಿ ಎಸ್‌ಐಆರ್‌ ಪ್ರಕ್ರಿಯೆ ಕೈಬಿಟ್ಟು, ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ – ಇಂಡಿಯಾ ಒಕ್ಕೂಟ ಆಗ್ರಹ

ಎಸ್‌ಐಆರ್‌ ಪ್ರಕ್ರಿಯೆ ಕೈಬಿಟ್ಟು, ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ – ಇಂಡಿಯಾ ಒಕ್ಕೂಟ ಆಗ್ರಹ

ಹಾಸನ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಇಂಡಿಯಾ ಒಕ್ಕೂಟ ಆಗ್ರಹಿಸಿದೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ಶಶಿಧರ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಏಕಪಕ್ಷೀಯವಾಗಿ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದ ಬಿಜೆಪಿ ಸರ್ಕಾರದ ಅಣತಿಯಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ಫಾರಂ ನಂ.7ರ ಮೂಲಕ ಮತದಾರರ ಹೆಸರನ್ನು ಮನಬಂದಂತೆ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆಯಾಗಿದ್ದು, ಕೂಡಲೇ ಜ್ಞಾನೇಶ್ ಕುಮಾರ್ ಅವರನ್ನು ಸಿಇಸಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಸಿಪಿಐ(ಎಂ) ಮುಖಂಡ ನವೀನ್ ಕುಮಾರ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆ ಅತ್ಯಂತ ಅಪಾಯಕಾರಿ. ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಹಿಂದಿನ ಕಾನೂನನ್ನು ಕೇಂದ್ರ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಂಡಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು. ಈಗಾಗಲೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಅರ್ಹ ಮತದಾರರನ್ನು ಮರು ಸೇರ್ಪಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸಿಪಿಐ ಮುಖಂಡ ಧರ್ಮರಾಜು, ಕಾಂಗ್ರೆಸ್ ಮುಖಂಡ ಸಲೀಂ ಕೊಲ್ಲಹಳ್ಳಿ, ಮಂಜುನಾಥ್ ಶರ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version