ರಾಜ್ಯಸಭಾ ಸದಸ್ಯೆ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರನ್ನು ನಿನ್ನೆ ಬೆಳಿಗ್ಗೆ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಿಗ್ಗೆ ಹೊಟ್ಟೆ ನೋವಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಅವರು ಪ್ರಸ್ತುತ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಆರೋಗ್ಯ ಪ್ರಸ್ತುತ ಉತ್ತಮವಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಜಯ್ ಸ್ವರೂಪ್ ತಿಳಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸೋನಿಯಾ ಗಾಂಧಿಯವರಿಗೆ 78 ವರ್ಷ ತುಂಬಿತ್ತು.